ಬೆಂಗಳೂರು : ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಮತ್ತೆ ಏರುತ್ತಿರುವ ಹಿನ್ನೆಲೆ, ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯವು ಶಾಲೆಗಳಿಗೆ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.
ಮೇ 26, 2025 ರಂದು ನಡೆದ ಸಭೆಯ ನಿರ್ಣಯಗಳ ಆಧಾರದ ಮೇಲೆ ಈ ಆದೇಶ ಹೊರಡಿಸಲಾಗಿದೆ ಎಂದು ಆಯುಕ್ತಾಲಯದ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಮುಖ ಮಾರ್ಗಸೂಚಿಗಳು ಹೀಗಿವೆ:
* ರೋಗಲಕ್ಷಣಗಳಿದ್ದಲ್ಲಿ ಶಾಲೆಗೆ ಹಾಜರಾಗಬೇಡಿ: ಜ್ವರ, ಕೆಮ್ಮು, ನೆಗಡಿ, ಗಂಟಲು ನೋವು ಮುಂತಾದ ಯಾವುದೇ ರೋಗಲಕ್ಷಣಗಳಿದ್ದರೆ, ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲೆಗೆ ಹಾಜರಾಗಬಾರದು ಎಂದು ಕಡ್ಡಾಯಗೊಳಿಸಲಾಗಿದೆ.
* ಮಾಸ್ಕ್ ಕಡ್ಡಾಯ, ಸಾಮಾಜಿಕ ಅಂತರ ಪಾಲನೆ: ತರಗತಿ ಕೊಠಡಿಗಳು ಸೇರಿದಂತೆ ಶಾಲಾ ಆವರಣದೊಳಗೆ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಧ್ಯವಾದಷ್ಟು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಸೂಚಿಸಲಾಗಿದೆ.
* ನೈರ್ಮಲ್ಯಕ್ಕೆ ಒತ್ತು: ಕೈಗಳನ್ನು ಆಗಾಗ ಸ್ವಚ್ಛವಾಗಿಟ್ಟುಕೊಳ್ಳಲು ಒತ್ತು ನೀಡಬೇಕು.
* ಕಫ್ ಎಟಿಕೆಟ್ ಪಾಲಿಸಿ: 'Cough Etiquette' (ಕೆಮ್ಮುವಾಗ ಬಾಯಿ ಮುಚ್ಚಿಕೊಳ್ಳುವುದು) ಮತ್ತು 'Covid-19 Appropriate Behaviour (CAB)' ಅಂದರೆ ಕೋವಿಡ್ ಸೂಕ್ತ ನಡವಳಿಕೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು.
* ಶಾಲಾ ಆಡಳಿತಕ್ಕೆ ಸೂಚನೆ: ಶಾಲಾ ಆಡಳಿತ ಮಂಡಳಿಗಳು ಕೋವಿಡ್-19 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನೋಡಿಕೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಈ ಆದೇಶವನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು, ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕರು, ಹಾಗೂ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ರವಾನಿಸಲಾಗಿದೆ. ಪ್ರಸ್ತುತ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ಆರೋಗ್ಯ ಇಲಾಖೆ ಮನವಿ ಮಾಡಿದೆ.
PublicNext
31/05/2025 02:56 pm