ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಹಲವಾರು ಮೃತದೇಹ ಹೂತಿದ್ದೇನೆ ಎಂಬ ಅನಾಮಿಕ ವ್ಯಕ್ತಿಯ ದೂರು ಪ್ರಕರಣದಲ್ಲಿ ಎಸ್ಐಟಿ ಪ್ರಾಮಾಣಿಕ ತನಿಖೆ ನಡೆಸಿ ಸಾರ್ವಜನಿಕರ ಮುಂದೆ ಬಹಿರಂಗಪಡಿಸಲಿ ಎಂದು ಶ್ರೀಕ್ಷೇತ್ರ ಧರ್ಮಸ್ಥಳದ ವಕ್ತಾರ ಕೆ.ಪಾರ್ಶ್ವನಾಥ್ ಜೈನ್ ತಿಳಿಸಿದ್ದಾರೆ.
ಧರ್ಮಸ್ಥಳ ಗ್ರಾಮದ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ "ಹಲವಾರು ಮೃತದೇಹಗಳನ್ನು ಹೂತಿದ್ದೆ" ಎಂಬ ದೂರು ಪ್ರಕರಣವು ಇತ್ತೀಚಿಗೆ ರಾಷ್ಟ್ರೀಯ ಮಟ್ಟದಲ್ಲಿ ಊಹಾಪೋಹಗಳು ಹಾಗೂ ಗೊಂದಲಗಳನ್ನು ಹುಟ್ಟುಹಾಕಿದೆ. ಈ ಘಟನೆಗೆ ಸಂಬಂಧಿಸಿದಂತೆ ಪ್ರಾಮಾಣಿಕವಾಗಿ ತನಿಖೆ ನಡೆಯಬೇಕೆಂಬ ನಮ್ಮ ಹಾಗೂ ಸಾರ್ವಜನಿಕರ ನಿರೀಕ್ಷೆ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಈ ಪ್ರಕರಣವನ್ನು ವಿಶೇಷ ತನಿಖಾ ತಂಡ(ಎಸ್.ಐ.ಟಿ.)ಕ್ಕೆ ಹಸ್ತಾಂತರಿಸಿದೆ. ಸರ್ಕಾರದ ಈ ನಿಲುವು ಉತ್ತಮವೆನಿಸಿದೆ.
ಸಮಾಜದ ನೈತಿಕತೆ ಹಾಗೂ ಶ್ರದ್ಧೆಗೆ ನಿಲುಕುವ ಬಲವಾದ ಆಧಾರವೆಂದರೆ ಸತ್ಯ. ಆದ್ದರಿಂದ ಪ್ರಕರಣದಲ್ಲಿ ಎಸ್.ಐ.ಟಿ. ತನಿಖಾ ತಂಡ ಸತ್ಯಾಂಶವನ್ನು ಅತಿ ಶೀಘ್ರವಾಗಿ ಪ್ರಾಮಾಣಿಕ ತನಿಖೆ ನಡೆಸಿ ಸಾರ್ವಜನಿಕರ ಮುಂದೆ ಬಹಿರಂಗಪಡಿಸಬೇಕು ಎಂಬುದು ನಮ್ಮ ಆಶಯ ಎಂದು ಕೆ. ಪಾರ್ಶ್ವನಾಥ್ ಜೈನ್ ಹೇಳಿದ್ದಾರೆ.
PublicNext
20/07/2025 10:38 pm