ಬೆಂಗಳೂರು : ಧರ್ಮಸ್ಥಳದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಎಸ್‌ಐಟಿ ರಚಿಸಿರುವುದು ಸ್ವಾಗತಾರ್ಹ. ಆದರೆ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ದೇವಾಲಯದ ಬಗ್ಗೆ ಅಪಪ್ರಚಾರ ಮಾಡುವುದು ಸರಿಯಲ್ಲ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಅವರು, ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಿದ್ದೇನೆ ಎಂದು ಅನಾಮಧೇಯ ವ್ಯಕ್ತಿ ಹೇಳಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ಈ ಪ್ರಕರಣಗಳಲ್ಲಿ ನಿಷ್ಪಕ್ಷಪಾತವಾದ ತನಿಖೆಯಾಗಲಿ ಯಾರನ್ನೂ ಸಿಕ್ಕಿಹಾಕಿಸುವ ಉದ್ದೇಶದಿಂದ ತನಿಖೆ ನಡೆಯಬಾರದು ಎಂದು ಆಗ್ರಹಿಸಿದರು.
ಯಾವುದೇ ವ್ಯಕ್ತಿ ತಪ್ಪು ಮಾಡಿದರೆ, ಆ ವ್ಯಕ್ತಿಯ ಬಗ್ಗೆ ಆರೋಪ ಮಾಡಲಿ. ಆದರೆ ಇಡೀ ಧಾರ್ಮಿಕ ಸಂಸ್ಥೆಯನ್ನು ಗುರಿ ಮಾಡಿ ಮಾತಾಡುವುದು ಸರಿಯಲ್ಲ. ಎಸ್‌ಐಟಿ ತಂಡಕ್ಕೆ ಸರ್ಕಾರ ಬೇರಾವುದೇ ಜವಾಬ್ದಾರಿ ವಹಿಸಬಾರದು. ಈ ತಂಡದ ಪೊಲೀಸರು ಸಂಪೂರ್ಣವಾಗಿ ತನಿಖೆ ಮಾಡಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಲಿ ಎಂದರು.
PublicNext
21/07/2025 09:23 pm