ಧಾರವಾಡ: ಈ ಸಮಾಜದಲ್ಲಿ ಶಿಕ್ಷಕರಿಗೆ ಅಪಾರವಾದ ಗೌರವ, ವಿಶ್ವಾಸ ಮತ್ತು ಅವರಲ್ಲಿ ನಂಬಿಕೆ ಇದೆ. ಶಿಕ್ಷಕರಿಂದ ನಿರೀಕ್ಷಿತ ಬದಲಾವಣೆ ಸಾಧ್ಯ. ಪ್ರತಿಯೊಬ್ಬ ಶಿಕ್ಷಕರು ಪ್ರಾಮಾಣಿಕವಾಗಿ ಪ್ರಯತ್ನ ಮಾಡಿ, ಮಕ್ಕಳ ಭವಿಷ್ಯವನ್ನು ಉತ್ತಮವಾಗಿ ರೂಪಿಸಬೇಕು ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.
ಧಾರವಾಡದ ಜೆಎಸ್ಎಸ್ ಕಾಲೇಜು ಆವರಣದಲ್ಲಿರುವ ಸನ್ನಿಧಿ ಕಲಾಕ್ಷೇತ್ರದಲ್ಲಿ ಭಾರತ ರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಜಿಲ್ಲಾ ಮಟ್ಟದ ಶಿಕ್ಷಕರ ದಿನೋತ್ಸವ ಹಾಗೂ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಕ ವೃತ್ತಿ ಪರಮ ಪವಿತ್ರವಾದದ್ದು, ವ್ಯಕ್ತಿ ಎಷ್ಟೇ ಎತ್ತರಕ್ಕೆ ಏರಿದರೂ ತನಗೆ ಶಿಕ್ಷಣ ನೀಡಿದ, ಪಾಠ ಕಲಿಸಿದ ಶಿಕ್ಷಕರ ಬಗ್ಗೆ ಅಪಾರವಾದ ಗೌರವ ಮತ್ತು ವಿಶ್ವಾಸವಿರುತ್ತದೆ. ಶಿಕ್ಷಕ ವೃತ್ತಿ ಶ್ರೇಷ್ಠವಾದದ್ದು, ಎಲ್ಲರೂ ವೃತ್ತಿಗೆ ಘನತೆ ತರುವಂತೆ ಕರ್ತವ್ಯ ನಿರ್ವಹಿಸಬೇಕೆಂದು ಸಚಿವರು ಹೇಳಿದರು.
ಜಿಲ್ಲಾಡಳಿತವು ಮಿಷನ್ ವಿದ್ಯಾಕಾಶಿ ಮೂಲಕ ಜಿಲ್ಲೆಯಲ್ಲಿ ಫಲಿತಾಂಶ ಸುಧಾರಣೆ ಹಾಗೂ ಶೈಕ್ಷಣಿಕ ಗುಣಮಟ್ಟ ಹೆಚ್ಚಳಕ್ಕೆ ಅನೇಕ ರೀತಿಯ ಕಾರ್ಯಕ್ರಮಗಳನ್ನು ರೂಪಿಸಿ, ಜಾರಿಗೊಳಿಸಿದೆ. ಆದರೆ ಕಳೆದ ಸಾಲಿನಲ್ಲಿ ನಿರೀಕ್ಷಿತ ಎಸ್.ಎಸ್.ಎಲ್.ಸಿ ಫಲಿತಾಂಶ ಲಭಿಸಲಿಲ್ಲ. ಇದಕ್ಕೆ ಶಿಕ್ಷಕರು ಕಾರಣರಾಗಿದ್ದಾರೆ. ಮುಂದಿನ ದಿನಗಳಲ್ಲಿ ನಮ್ಮ ಜಿಲ್ಲೆಯು ರಾಜ್ಯದ ಮೊದಲ ಹತ್ತು ಜಿಲ್ಲೆಗಳಲ್ಲಿ ಇರಬೇಕು. ಈ ನಿಟ್ಟಿನಲ್ಲಿ ತಾವು ಸೇರಿದಂತೆ ಜಿಲ್ಲಾಡಳಿತವು ಅಗತ್ಯ ಸಹಕಾರ, ಮಾರ್ಗದರ್ಶನವನ್ನು ನೀಡಲಿದೆ ಎಂದು ಸಚಿವ ಸಂತೋಷ ಲಾಡ್ ಅವರು ಹೇಳಿದರು.
ಶಾಸಕ ಎನ್.ಎಚ್.ಕೋನರಡ್ಡಿ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಮೇಯರ್ ಜ್ಯೋತಿ ಪಾಟೀಲ, ಜಿಲ್ಲಾ ಪಂಚಾಯುತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಮಾತನಾಡಿದರು.
ಧಾರವಾಡ ಮುರುಘಾಮಠದ ಡಾ.ಮಲ್ಲಿಕಾರ್ಜುನ ಮಹಾಸ್ವಾಮಿಗಳು ಆರ್ಶಿವಚನ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾಮಟ್ಟದ ಶಿಕ್ಷಕ ಪ್ರಶಸ್ತಿ ವಿಜೇತರನ್ನು ಪ್ರಮಾಣ ಪತ್ರ ನೀಡಿ, ಗೌರವಿಸಲಾಯಿತು.
Kshetra Samachara
06/09/2025 10:13 pm