ಬೆಂಗಳೂರು: ನೆಲಮಂಗಲ ನಗರದಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ರಸ್ತೆಯಲ್ಲಿ ನೀರಿನ ಪೈಪ್‌ಲೈನ್ ಅಳವಡಿಕೆಗಾಗಿ ಅಗೆದಿದ್ದ ಗುಂಡಿಗೆ ಬೈಕ್ ಚಕ್ರ ಇಳಿದ ಪರಿಣಾಮ, ಮುಂದಿದ್ದ ಇನ್ನೊಂದು ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿ ಬೈಕ್ ಸವಾರ ಸಡನ್ ಬ್ರೇಕ್ ಹಾಕಿದ್ದಾರೆ. ಇದರಿಂದ ನಿಯಂತ್ರಣ ಕಳೆದುಕೊಂಡ ಬೈಕ್ ರಸ್ತೆಗೆ ಬಿದ್ದು ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗುಂಡಿಯನ್ನು ತಪ್ಪಿಸುವ ವೇಳೆ ಸಂಭವಿಸಿದ ಈ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಅಪೂರ್ಣ ಕಾಮಗಾರಿಯೇ ದುರಂತಕ್ಕೆ ಕಾರಣ
ನೀರಿನ ಪೈಪ್‌ಲೈನ್ ಕಾಮಗಾರಿ ಮುಗಿದಿದ್ದರೂ, ಅಗೆದ ಗುಂಡಿಯನ್ನು ಸಂಪೂರ್ಣವಾಗಿ ಮುಚ್ಚದ ನಿರ್ಲಕ್ಷ್ಯವೇ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ಇಸ್ಲಾಂಪುರ ಗ್ರಾಮದ ನಿವಾಸಿ ತಬ್ರೇಜ್ ಎಂಬುವವರೇ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ. ಅಪಘಾತ ಸಂಭವಿಸಿದ ಕೂಡಲೇ ಅವರನ್ನು ನಗರದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿರುವ ತಬ್ರೇಜ್ ಪ್ರಸ್ತುತ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಈ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
PublicNext
18/12/2025 05:35 pm
LOADING...