ಕಾಗವಾಡ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮೇಲೆ ಸಾಲದ ಹೊರೆ ದಿನೇದಿನೇ ಹೆಚ್ಚಾಗುತ್ತಿದ್ದು, ಪರಿಣಾಮವಾಗಿ ಸಮಗ್ರ ಅಭಿವೃದ್ಧಿ ಸ್ಥಗಿತಗೊಂಡಿದೆ ಎಂದು ಮಾಜಿ ಸಚಿವ ಶ್ರೀಮಂತ ಪಾಟೀಲ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಹೊಸ ಅಭಿವೃದ್ಧಿ ಕಾರ್ಯಗಳು ಕಾಣುತ್ತಿಲ್ಲ. ಈಗಾಗಲೇ ನಡೆಯುತ್ತಿದ್ದ ಯೋಜನೆಗಳೂ ಕುಂಠಿತಗೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಹೇಳಿದರು.
ಇದೇ ವೇಳೆ ಹಿಪ್ಪರಗಿ ಬ್ಯಾರೇಜ್ ಗೇಟ್ ಹಾನಿಯಿಂದ ಅಪಾರ ಪ್ರಮಾಣದ ನೀರು ವ್ಯರ್ಥವಾಗಿ ಹರಿದು ಹೋಗುತ್ತಿರುವ ಕುರಿತು ಗಂಭೀರ ಆತಂಕ ವ್ಯಕ್ತಪಡಿಸಿದರು. ಈ ಘಟನೆ ರೈತರಲ್ಲಿ ಭೀತಿಯನ್ನುಂಟುಮಾಡಿದ್ದು, ಕೃಷಿ ಅವಲಂಬಿತ ಪ್ರದೇಶಗಳಲ್ಲಿ ಭವಿಷ್ಯದ ಬಗ್ಗೆ ಚಿಂತೆ ಹೆಚ್ಚಾಗಿದೆ ಎಂದರು.
ಈ ಸಮಸ್ಯೆಯ ಕುರಿತು ಸಂಬಂಧಪಟ್ಟವರು ಯಾವುದೇ ಕಾಳಜಿ ತೋರಿಸುತ್ತಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯದ ನಡುವೆಯೂ ಇದುವರೆಗೂ ಯಾರ ಮೇಲೂ ಕ್ರಮ ಕೈಗೊಳ್ಳಲಾಗಿಲ್ಲ. ಇನ್ನೂ ನೀರು ಪೋಲಾಗುವುದನ್ನು ನಿಲ್ಲಿಸುವ ಕೆಲಸವಾಗಿಲ್ಲ ಎಂಬುದು ದುಃಖಕರ ಸಂಗತಿ ಎಂದು ಟೀಕಿಸಿದರು.
ಅವರು ಹೇಳುವಂತೆ, ಕೇವಲ 30 ಲಕ್ಷ ರೂಪಾಯಿ ವೆಚ್ಚದಲ್ಲಿ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬಹುದಿತ್ತು. ಆದರೆ ಸರ್ಕಾರದ ನಿರ್ಲಕ್ಷ್ಯದಿಂದ ರೈತರಿಗೆ ನಷ್ಟವಾಗುತ್ತಿದೆ ಎಂದು ಆರೋಪಿಸಿದರು.
ಮಹಾರಾಷ್ಟ್ರದಿಂದ ನೀರು ಬಿಡುಗಡೆಗೊಳಿಸುವ ವಿಚಾರದಲ್ಲಿ ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು. ಮಹಾರಾಷ್ಟ್ರ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದರೆ ನೀರು ಬಿಡುವ ಸಾಧ್ಯತೆ ಇದೆ. ಆದರೆ ಈ ವಿಚಾರದಲ್ಲಿಯೂ ಸರ್ಕಾರ ವಿಫಲವಾಗಿದೆ ಎಂದು ಹೇಳಿದರು.
ಸರ್ಕಾರ ತಕ್ಷಣ ಎಚ್ಚೆತ್ತುಕೊಳ್ಳದಿದ್ದರೆ, ರೈತರು ಮತ್ತೆ ಸುಧಾರಣೆಯ ಹಾದಿಗೆ ಬರಲು ಕನಿಷ್ಠ ಐದು ವರ್ಷಗಳ ಕಾಲ ಬೇಕಾಗುತ್ತದೆ ಎಂದು ಮಾಜಿ ಸಚಿವ ಶ್ರೀಮಂತ ಪಾಟೀಲ ಎಚ್ಚರಿಸಿದರು.
PublicNext
01/02/2026 05:28 pm
LOADING...