ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಸಂಸೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಸ್ತೆ ಅಭಿವೃದ್ಧಿ ಕಾಮಗಾರಿಯು ಇದೀಗ ರಾಜಕೀಯ ಜಟಾಪಟಿಗೆ ವೇದಿಕೆಯಾಗಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ.
ಸಂಸೆಯಿಂದ ಎಳನೀರು, ಧರ್ಮಸ್ಥಳ ಹಾಗೂ ನೇತ್ರಾವತಿ ಭಾಗಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಾಗಿ ಗ್ರಾಮಸ್ಥರು ದಶಕಗಳಿಂದ ಹೋರಾಟ ನಡೆಸುತ್ತಿದ್ದರು. ಪ್ರಸ್ತುತ ಶಾಸಕಿ ನಯನಾ ಮೋಟಮ್ಮ ಅವರ ವಿಶೇಷ ಆಸಕ್ತಿಯಿಂದ 80 ಲಕ್ಷ ರೂಪಾಯಿ ಅನುದಾನದಲ್ಲಿ ಕಾಮಗಾರಿ ಆರಂಭವಾಗಿದೆ. ಆದರೆ, ರಸ್ತೆ ಕೆಲಸವು ಕಳಪೆಯಾಗಿ ನಡೆಯುತ್ತಿದೆ ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಬಿಜೆಪಿಗರ ಈ ಆರೋಪಕ್ಕೆ ಸ್ಥಳದಲ್ಲೇ ತಿರುಗೇಟು ನೀಡಿದ ಕಾಂಗ್ರೆಸ್ ಕಾರ್ಯಕರ್ತರು, ಕಾಮಗಾರಿಯಲ್ಲಿ ಯಾವುದೇ ಕಳಪೆ ಗುಣಮಟ್ಟ ಇಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ. ಅಲ್ಲದೆ, ಬಿಜೆಪಿಗರು ಅನಗತ್ಯವಾಗಿ ರಸ್ತೆ ಕಾಮಗಾರಿ ವಿಚಾರ ಹಿಡಿದು ರಾಜಕೀಯ ಮಾಡುವುದನ್ನು ಬಿಟ್ಟು, ಬಿಎಸ್‌ಎನ್‌ಎಲ್ ಟವರ್ ಸಮಸ್ಯೆ ಹಾಗೂ ಕುದುರೆಮುಖವನ್ನು ರಾಷ್ಟ್ರೀಯ ಉದ್ಯಾನವನಕ್ಕೆ ಬಿಟ್ಟುಕೊಡಲು ಮುಂದಾಗಿರುವ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಲಿ ಎಂದು ಟಾಂಗ್ ನೀಡಿದ್ದಾರೆ.
ಎರಡು ಪಕ್ಷಗಳ ಕಾರ್ಯಕರ್ತರ ನಡುವಿನ ಈ ಜಟಾಪಟಿಯಿಂದಾಗಿ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು ಹೀಗಾಗಿ ಕಳಸ ಪೊಲೀಸರು ಮಧ್ಯ ಪ್ರವೇಶಿಸಿ ವಾತಾವರಣವನ್ನು ತಿಳಿಗೊಳಿಸಿದರು. ಅಲ್ಲದೇ ಗುತ್ತಿಗೆದಾರರಿಗೆ ಗುಣಮಟ್ಟದ ಕೆಲಸ ಮಾಡುವಂತೆ ಎಚ್ಚರಿಕೆ ನೀಡಲಾಗಿದ್ದು, ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಬಂದು ವೈಜ್ಞಾನಿಕವಾಗಿ ರಸ್ತೆ ನಿರ್ಮಿಸಿಕೊಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಒಟ್ಟಾರೆಯಾಗಿ, ದಶಕಗಳ ಕಾಲದ ರಸ್ತೆ ಕನಸು ನನಸಾಗುತ್ತಿರುವ ಹೊತ್ತಲ್ಲೇ ಈ ರಾಜಕೀಯ ಜಟಾಪಟಿ ಸಾರ್ವಜನಿಕರ ಚರ್ಚೆಗೆ ಗ್ರಾಸವಾಗಿದೆ. ಅಭಿವೃದ್ಧಿ ಕೆಲಸಗಳಲ್ಲಿ ರಾಜಕೀಯ ಬೆರೆಸುವ ಬದಲು, ಗುಣಮಟ್ಟದ ರಸ್ತೆಯನ್ನು ಪೂರ್ಣಗೊಳಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆನ್ನುವುದೇ ಸ್ಥಳೀಯರ ಪ್ರಮುಖ ಒತ್ತಾಯವಾಗಿದೆ.
-ಡ್ಯಾನಿ, ಪಬ್ಲಿಕ್ ನೆಕ್ಸ್ಟ್, ಚಿಕ್ಕಮಗಳೂರು
PublicNext
02/02/2026 07:38 am