ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಕಾಫಿನಾಡಿಗೆ ಮಂಗನ ಕಾಯಿಲೆ ಆತಂಕ - ಎನ್.ಆರ್.ಪುರದಲ್ಲಿ 9 ಮಂದಿಗೆ ದೃಢ!

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಗೆ ಮಂಗನ ಕಾಯಿಲೆ (ಕೆ.ಎಫ್.ಡಿ) ಆತಂಕ ಎದುರಾಗಿದ್ದು, ಜಿಲ್ಲೆಯಾದ್ಯಂತ ಹೆಚ್ಚಿನ ಜಾಗರೂಕತೆ ವಹಿಸಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಯುವಕನೊಬ್ಬ ಮಂಗನ ಕಾಯಿಲೆಗೆ ಬಲಿಯಾದ ಬೆನ್ನಲ್ಲೇ, ಕಾಫಿನಾಡಿನ ಎನ್.ಆರ್. ಪುರ ತಾಲೂಕಿನಲ್ಲಿ ಒಂಬತ್ತು ಮಂದಿಗೆ ಮಂಗನ ಕಾಯಿಲೆ ದೃಢಪಟ್ಟಿರುವುದು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಆತಂಕ ಹೆಚ್ಚಿಸಿದೆ. ಆರೋಗ್ಯ ಇಲಾಖೆಯು ಇಲ್ಲಿಯವರೆಗೆ ಒಟ್ಟು 595 ಜನರ ರಕ್ತದ ಮಾದರಿಗಳನ್ನು ಪರೀಕ್ಷಿಸಿದ್ದು, ಈ ಒಂಬತ್ತು ಪ್ರಕರಣಗಳು ಎನ್.ಆರ್. ಪುರ ತಾಲೂಕಿನಿಂದ ವರದಿಯಾಗಿವೆ. ಸೋಂಕಿತರ ಪೈಕಿ ಆರು ಮಂದಿ ಈಗಾಗಲೇ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಉಳಿದ ಮೂವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊಪ್ಪ, ಎನ್.ಆರ್. ಪುರ ಹಾಗೂ ಶೃಂಗೇರಿ ತಾಲೂಕುಗಳಲ್ಲಿ ಆರೋಗ್ಯ ಇಲಾಖೆ ತೀವ್ರ ನಿಗಾ ವಹಿಸಿದ್ದು, ವಿಶೇಷವಾಗಿ ಎನ್.ಆರ್. ಪುರ ಮತ್ತು ಕೊಪ್ಪ ತಾಲೂಕುಗಳ ಗಡಿ ಭಾಗಗಳಲ್ಲಿ ಹೆಚ್ಚು ಪ್ರಕರಣಗಳು ಕಂಡುಬರುತ್ತಿವೆ. ಕಳೆದ ಬಾರಿ ಜಿಲ್ಲೆಯ 94 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡು ಮೂವರು ಸಾವನ್ನಪ್ಪಿದ್ದರು. ಆ ಸಂದರ್ಭದಲ್ಲಿ ಕೊಪ್ಪ ತಾಲೂಕಿನಲ್ಲಿ ಅತಿ ಹೆಚ್ಚು ಪ್ರಕರಣಗಳು ವರದಿಯಾಗಿದ್ದವು. ಪ್ರಸ್ತುತ ಪರಿಸ್ಥಿತಿಯ ಗಂಭೀರತೆಯನ್ನು ಅರಿತು, ಆರೋಗ್ಯ ಇಲಾಖೆಯು ಉಣ್ಣೆಗಳ ಸಂಗ್ರಹ ಮತ್ತು ಪರೀಕ್ಷಾ ಕಾರ್ಯವನ್ನು ಚುರುಕುಗೊಳಿಸಿದೆ. ಕಾಡಿಗೆ ತೆರಳುವವರು ಹಾಗೂ ತೋಟಗಳಲ್ಲಿ ಕೆಲಸ ಮಾಡುವವರು ಕಡ್ಡಾಯವಾಗಿ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.

ಮುನ್ನೆಚ್ಚರಿಕಾ ಕ್ರಮಗಳು ಮತ್ತು ಜಾಗೃತಿ

ರೋಗ ಹರಡುವುದನ್ನು ತಡೆಯಲು, ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಮಂಗನ ಕಾಯಿಲೆ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಯಾವುದೇ ವ್ಯಕ್ತಿಗೆ ಜ್ವರದ ಲಕ್ಷಣಗಳು ಕಂಡುಬಂದಲ್ಲಿ, ತಕ್ಷಣವೇ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ರಕ್ತ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಾರ್ವಜನಿಕರಿಗೆ ಸಲಹೆ ನೀಡಲಾಗಿದೆ. ಜಿಲ್ಲೆಯಲ್ಲಿ ಅಗತ್ಯವಿರುವ ಡಿ.ಎಂ.ಪಿ ತೈಲ ಮತ್ತು ಔಷಧಿಗಳನ್ನು ಈಗಾಗಲೇ ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಮಾಡಿಕೊಳ್ಳಲಾಗಿದೆ. ಸಾರ್ವಜನಿಕರು ಅನಗತ್ಯವಾಗಿ ಆತಂಕಪಡದೆ, ಆರೋಗ್ಯ ಇಲಾಖೆ ನೀಡಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

Edited By : Manjunath H D
PublicNext

PublicNext

02/02/2026 09:04 am

Cinque Terre

15.92 K

Cinque Terre

0

ಸಂಬಂಧಿತ ಸುದ್ದಿ