ಅರಸೀಕೆರೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ಅತಿ ವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಭಾನುವಾರ (ಫೆಬ್ರವರಿ 01, 2026) ಸಂಜೆ ನಡೆದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಘಟನೆಯಲ್ಲಿ ಒಬ್ಬರು ಮೃತಪಟ್ಟು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.
ಪ್ರತ್ಯಕ್ಷದರ್ಶಿಗಳು ತಿಳಿಸಿರುವಂತೆ, ಹ್ಯುಂಡೈ ಐ-20 ಕಾರು ಅತಿ ವೇಗವಾಗಿ ಚಲಿಸುತ್ತಿತ್ತು. ಮತ್ತೊಂದು ವಾಹನವನ್ನು ಓವರ್ ಟೇಕ್ ಮಾಡಲು ಪ್ರಯತ್ನಿಸಿದಾಗ ಚಾಲಕನ ನಿಯಂತ್ರಣ ತಪ್ಪಿದೆ. ರಸ್ತೆ ಮಧ್ಯದ ಡಿವೈಡರ್‌ಗೆ ಬಲವಾಗಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಹಲವು ಬಾರಿ ಉರುಳಿ ಪಕ್ಕದ ಲೇನ್‌ಗೆ ಬಿದ್ದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಯಲ್ಲಿದ್ದ ವಿದ್ಯುತ್ ಕಂಬವೂ ನೆಲಸಮವಾಗಿದೆ.
ಅಪಘಾತದ ನಂತರ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವಾಹನವು ಬಹುತೇಕ ಸುಟ್ಟು ಕರಕಲಾಗಿದೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಸ್ಥಳೀಯ ಸಾರ್ವಜನಿಕರು ಕೂಡಲೇ ಕಾರ್ಯಪ್ರವೃತ್ತರಾಗಿ ಪಲ್ಟಿಯಾಗಿದ್ದ ಕಾರಿನೊಳಗೆ ಸಿಲುಕಿದ್ದವರನ್ನು ಹೊರತೆಗೆದು ಮಾನವೀಯತೆ ಮೆರೆದಿದ್ದಾರೆ.
ಹಾರನಹಳ್ಳಿ ಮೂಲದ ಓರ್ವ ಯುವಕ (30) ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇವರ ಮೃತದೇಹವನ್ನು ಅರಸೀಕೆರೆ ತಾಲ್ಲೂಕು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.ನವೀನ್ ಮತ್ತು ಪವನ್ ಎಂಬುವವರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಹಾಸನದ MMM ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅತಿಯಾದ ವೇಗ ಹಾಗೂ ಅಜಾಗರೂಕತೆಯ ಚಾಲನೆಯೇ ಈ ಭೀಕರ ದುರಂತಕ್ಕೆ ಕಾರಣವೆಂದು ಪ್ರಾಥಮಿಕವಾಗಿ ತಿಳಿದುಬಂದಿದೆ. ಬಾಣಾವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
PublicNext
02/02/2026 12:09 pm
LOADING...