ಸಕಲೇಶಪುರ: ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಉದೇವಾರ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಸಾಮಾಜಿಕ ಜಾಗೃತಿ ಮತ್ತು ಪ್ರಶ್ನಿಸುವ ಧೈರ್ಯ ಬೆಳೆಸುವ ಉದ್ದೇಶದಿಂದ ಮಾದರಿ ಯುವ ಗ್ರಾಮಸಭೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಈ ಕಾರ್ಯಕ್ರಮದ ಮೂಲಕ ಗ್ರಾಮ ಪಂಚಾಯಿತಿ ವ್ಯವಸ್ಥೆ ಹಾಗೂ ಗ್ರಾಮಸಭೆಯ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅರಿವು ಮೂಡಿಸುವ ಪ್ರಯತ್ನ ಮಾಡಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಗ್ರಾಮಸಭೆಯ ಅಧ್ಯಕ್ಷರು, ಸದಸ್ಯರು ಮತ್ತು ಸಾರ್ವಜನಿಕರ ಪಾತ್ರಗಳನ್ನು ವಹಿಸಿಕೊಂಡು ಗ್ರಾಮಾಭಿವೃದ್ಧಿ, ಸ್ವಚ್ಛತೆ, ಶಿಕ್ಷಣ ಹಾಗೂ ಪರಿಸರ ಸಂರಕ್ಷಣೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಉದೇವಾರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಾಹಿತ್ಯ ಮಾತನಾಡಿ, ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗಳು ಹಾಗೂ ಕಾರ್ಯಕ್ರಮದ ಶಿಸ್ತು ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಮಾದರಿಯಾಗುವಂತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಶಾಲೆಯ ಮುಖ್ಯೋಪಾಧ್ಯಾಯರಾದ ಹೆಚ್.ಎನ್. ಕೃಷ್ಣಮೂರ್ತಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಪ್ರಶ್ನಿಸುವ ಧೈರ್ಯ ಮತ್ತು ನಾಯಕತ್ವ ಗುಣ ಬೆಳೆದರೆ ಭವಿಷ್ಯದಲ್ಲಿ ಉತ್ತಮ ನಾಯಕರು ಸಮಾಜಕ್ಕೆ ದೊರೆಯುತ್ತಾರೆ. ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ಜವಾಬ್ದಾರಿ ಮತ್ತು ಸಾಮಾಜಿಕ ಕಾಳಜಿಯನ್ನು ಬೆಳೆಸಲು ಸಹಕಾರಿಯಾಗುತ್ತವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದು, ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿದರು.
Kshetra Samachara
08/03/2026 04:09 pm
LOADING...