ವಿಜಯಪುರ: ಮಹಿಳೆಯರು ಸ್ತ್ರೀಶಕ್ತಿ ಮತ್ತು ಸ್ವಸಹಾಯ ಸಂಘಗಳಲ್ಲಿ ಕ್ರಿಯಾಶೀಲರಾಗಿ ಆರ್ಥಿಕ ಸಬಲೀಕರಣ ಹೊಂದಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಹೇಳಿದರು.
ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಿಶು ಅಭಿವೃದ್ಧಿ ಯೋಜನೆ, ಸರ್ಕಾರೇತರ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮಹಿಳಾ ಸಬಲೀಕರಣಕ್ಕಾಗಿ ಸರ್ಕಾರ ಸಾಕಷ್ಟು ಯೋಜನೆ ಜಾರಿಗೊಳಿಸಿದೆ. ಅನೇಕ ಯೋಜನೆಗಳ ಅನುಷ್ಠಾನದ ಮೂಲಕ ಮಹಿಳೆಯರನ್ನು ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಸಬಲರನ್ನಾಗಿಸುವ ಮೂಲಕ ಅವರನ್ನು ಸಬಲೀಕರಣ ಗೊಳಿಸಲಾಗುತ್ತಿದೆ ಎಂದರು.
ಇದೇ ವೇಳೆ ಬಾಲ್ಯ ವಿವಾಹ ದಂತಹ ಅನೇಕ ಸಾಮಾಜಿಕ ಸೇವೆ, ಮಕ್ಕಳ ಹಕ್ಕುಗಳ ರಕ್ಷಣೆ ಸೇರಿದಂತೆ ಸಾಮಾಜಿಕ ಕಳಕಳಿಯ ಕಾರ್ಯ ನಿರ್ವಹಿಸಿರುವ ಮಹಿಳಾ ಮೇಲ್ವಿಚಾರಕರು, ಇಲಾಖೆಯ ಅಧಿಕಾರಿಗಳನ್ನು ಸನ್ಮಾನಿಸಲಾಯಿತು.
ಇನ್ನೂ ಗ್ರಾಮೀಣ ಭಾಗದಲ್ಲಿ ಮಕ್ಕಳ ಶ್ರೇಯೋಭಿವೃದ್ಧಿಗೆ ಕಾರ್ಯ ನಿರ್ವಹಿಸಿರುವ ವಿವಿಧ ಸರ್ಕಾರೇತರ ಸಂಘ ಸಂಸ್ಥೆಗಳ ಪದಾಧಿಕಾರಿಗಳನ್ನು ಇದೇ ವೇಳೆ ಸನ್ಮಾನಿಸಲಾಯಿತು.
ಈ ವೇಳೆ ಅಕ್ಕ ಪಡೆಯ ಸಿಬ್ಬಂದಿ ಮಹಿಳೆಯರು ಹೇಗೆ ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕು ಎಂದು ಪ್ರಾಯೋಗಿಕವಾಗಿ ಮಾಡಿ ತೋರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕೆ ಕೆ ಚವ್ಹಾಣ, ಬಸವರಾಜ್ ಜಗಲೂರು, ಸೇರಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಂಗನವಾಡಿ ಮೇಲ್ವಿಚಾರಕರು ಕಾರ್ಯಕರ್ತರು ಹಾಗೂ ಸಹಾಯಕಿಯರು, ಸಾರ್ವಜನಿಕರು ಉಪಸ್ಥಿತರಿದ್ದರು.
PublicNext
08/03/2026 05:57 pm