ದಾವಣಗೆರೆ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ತಡವಾಗಿ ಆರಂಭವಾದ ಹಿನ್ನೆಲೆ ದಾವಣಗೆರೆ ಜಿಲ್ಲಾಧಿಕಾರಿ ವಿರುದ್ಧ ಹರಿಹರ ಬಿಜೆಪಿ ಶಾಸಕ ಬಿ. ಪಿ ಹರೀಶ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಿಲ್ಲಾಧಿಕಾರಿ ಒಂದು ಕುಟುಂಬದ ಸೇವಕರಂತೆ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ವಿಡಿಯೋ ಹೇಳಿಕೆ ಮೂಲಕ ಎಚ್ಚರಿಕೆ ನೀಡಿದ್ದಾರೆ. ದಾವಣಗೆರೆಯ ನೌಕರರ ಭವನದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ನಿನ್ನೆ ಬೆಳಿಗ್ಗೆ 11 ಗಂಟೆಗೆ ನಿಗದಿಯಾಗಿತ್ತು. ಆದರೆ ಕಾರ್ಯಕ್ರಮ ಮಧ್ಯಾಹ್ನ 2 ಗಂಟೆಗೆ ಆರಂಭಗೊಂಡಿದ್ದು ಇದಕ್ಕೆ ಹರಿಹರ ಬಿಜೆಪಿ ಶಾಸಕ ಬಿಪಿ ಹರೀಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಭಾ ಮಲ್ಲಿಕಾರ್ಜುನ ಅವರಿಗೆ ಕಾಯುತ್ತ ಕಾರ್ಯಕ್ರಮವನ್ನು ತಡವಾಗಿ ಆರಂಭಿಸಲಾಗಿದೆ ಎಂದು ಶಾಸಕ ಆರೋಪಿಸಿದ್ದಾರೆ. ದಾವಣಗೆರೆ ಜಿಲ್ಲಾಡಳಿತ ಹಲವು ಕಾರ್ಯಕ್ರಮಗಳನ್ನು ನಿಗದಿತ ಸಮಯಕ್ಕೆ ಆರಂಭ ಮಾಡದೇ ತಡಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ. ಜಿಲ್ಲಾಧಿಕಾರಿ ಗಂಗಾಧರ್ ಸ್ವಾಮಿ ಸರ್ಕಾರದ ಅಧಿಕಾರಿಯಾಗಿ ಕೆಲಸ ಮಾಡಬೇಕು, ಒಂದು ಕುಟುಂಬದ ಸೇವಕರಂತೆ ವರ್ತಿಸಬಾರದು ಎಂದು ಶಾಸಕ ಹರೀಶ್ ಹೇಳಿದ್ದಾರೆ.
ಜೊತೆಗೆ ತಪ್ಪುಗಳನ್ನು ಪ್ರಶ್ನಿಸುತ್ತಿರುವ ಕಾರಣಕ್ಕೆ ತಮ್ಮ ಮೊಬೈಲ್ ನಂಬರ್ ಅನ್ನು ಬ್ಲ್ಯಾಕ್ ಲಿಸ್ಟ್‌ಗೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ತಕ್ಷಣವೇ ತಮ್ಮ ನಂಬರ್ ಅನ್ನು ಬ್ಲ್ಯಾಕ್ ಲಿಸ್ಟ್‌ನಿಂದ ತೆಗೆದು ಜನರ ಸಮಸ್ಯೆಗಳನ್ನು ಕೇಳಬೇಕು ಎಂದು ಆಗ್ರಹಿಸಿದ ಅವರು, ಜಿಲ್ಲೆಯಲ್ಲಿ ಕಾರ್ಯಕ್ರಮಗಳನ್ನು ನಿಗದಿತ ಸಮಯಕ್ಕೆ ಆರಂಭಿಸಬೇಕು. ಇಲ್ಲವಾದರೆ ಜಿಲ್ಲಾಡಳಿತದ ವಿರುದ್ಧ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
PublicNext
09/03/2026 07:06 pm