ಚಿತ್ರದುರ್ಗ: ಜಿಲ್ಲೆಯಾದ್ಯಂತ ಮಾರ್ಚ್ 18 ರಿಂದ ಏಪ್ರಿಲ್ 02 ರವರೆಗೆ ನಡೆಯಲಿರುವ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳನ್ನು ಯಾವುದೇ ಅಕ್ರಮಗಳಿಗೆ ಅವಕಾಶವಿಲ್ಲದೆ, ಸುಗಮವಾಗಿ ಮತ್ತು ಪಾರದರ್ಶಕವಾಗಿ ನಡೆಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಟಿ. ವೆಂಕಟೇಶ್ ಅವರು ಮಹತ್ವದ ಆದೇಶ ಹೊರಡಿಸಿದ್ದಾರೆ. ಪರೀಕ್ಷಾ ಅಕ್ರಮಗಳನ್ನು ತಡೆಯುವ ಸಲುವಾಗಿ, ಜಿಲ್ಲೆಯ 84 ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ರ ಕಲಂ 163 ರ ಅಡಿಯಲ್ಲಿ ಈ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.
ಪರೀಕ್ಷಾ ದಿನಗಳಂದು, ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ಜೆರಾಕ್ಸ್ ಅಂಗಡಿಗಳು ಮತ್ತು ಕಂಪ್ಯೂಟರ್ ಇಂಟರ್ನೆಟ್ ಕೇಂದ್ರಗಳನ್ನು ಕಡ್ಡಾಯವಾಗಿ ಮುಚ್ಚುವಂತೆ ಸೂಚಿಸಲಾಗಿದೆ. ಈ ಕ್ರಮವು ಪರೀಕ್ಷಾ ಸಮಯದಲ್ಲಿ ಯಾವುದೇ ರೀತಿಯ ದುರುಪಯೋಗ ಅಥವಾ ಅಕ್ರಮಗಳಿಗೆ ಅವಕಾಶ ನೀಡದಂತೆ ತಡೆಯುವ ಉದ್ದೇಶ ಹೊಂದಿದೆ.
ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ಫೋನ್ ಅಥವಾ ಇನ್ನಿತರೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಈ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಎಚ್ಚರಿಕೆ ನೀಡಿದ್ದಾರೆ.
Kshetra Samachara
16/03/2026 07:36 pm
LOADING...