ಚಳ್ಳಕೆರೆ: ಯುಗಾದಿ ಹಬ್ಬದ ಸಡಗರದ ನಡುವೆಯೂ, ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ನಗರದ ಹೆಗ್ಗೆರೆ ತಾಯಮ್ಮ ಬಾಲಕಿಯರ ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪೂರ್ವ ಸಿದ್ಧತಾ ಶಿಬಿರವನ್ನು ಆಯೋಜಿಸುವ ಮೂಲಕ ಶಿಕ್ಷಕರು ಮಾದರಿಯಾಗಿದ್ದಾರೆ.ರಜಾ ದಿನಗಳನ್ನೂ ಸದುಪಯೋಗಪಡಿಸಿಕೊಂಡು ಶಿಕ್ಷಕರು ತೋರುತ್ತಿರುವ ಈ ಬದ್ಧತೆ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.
ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಲು ಹಾಗೂ ಉತ್ತಮ ಫಲಿತಾಂಶ ಪಡೆಯಲು ಈ ಶಿಬಿರ ಪೂರಕವಾಗಿದೆ. ಶಾಲಾ ಆವರಣದಲ್ಲಿ ಮೈಕ್ ವ್ಯವಸ್ಥೆಯ ಮೂಲಕ ಶಿಕ್ಷಕರು ಪಾಠಗಳನ್ನು ಬೋಧಿಸುತ್ತಾ, ಪರೀಕ್ಷೆಯಲ್ಲಿ ಉತ್ತರಗಳನ್ನು ಸಮರ್ಪಕವಾಗಿ ಬರೆಯುವ ಕುರಿತು ವಿವರವಾದ ಮಾರ್ಗದರ್ಶನ ನೀಡುತ್ತಿದ್ದಾರೆ.
ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದ ವಿದ್ಯಾರ್ಥಿನಿಯರಿಗೆ ಪ್ರತ್ಯೇಕವಾಗಿ ತರಗತಿಗಳನ್ನು ನಡೆಸಲಾಗುತ್ತಿದೆ. ವಿಶೇಷವಾಗಿ ವಿಜ್ಞಾನ ಮತ್ತು ಗಣಿತ ವಿಷಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಹಳೆಯ ಪ್ರಶ್ನೆಪತ್ರಿಕೆಗಳು ಹಾಗೂ ಮಂಡಳಿಯ ಮಾದರಿ ಪ್ರಶ್ನೆಪತ್ರಿಕೆಗಳ ಆಧಾರದ ಮೇಲೆ ತರಬೇತಿ ನೀಡಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳಿಗೆ ಪ್ರಶ್ನೆಗಳ ಸ್ವರೂಪ ಮತ್ತು ಉತ್ತರ ಬರೆಯುವ ಶೈಲಿಯ ಬಗ್ಗೆ ಸ್ಪಷ್ಟತೆ ಸಿಗುತ್ತಿದೆ.
ಪ್ರತಿ ವಿದ್ಯಾರ್ಥಿಯ ಕಲಿಕಾ ಸಾಮರ್ಥ್ಯವನ್ನು ಗಮನಿಸಿ ಮಾರ್ಗದರ್ಶನ ನೀಡಲಾಗುತ್ತಿದೆ. ವಿಶೇಷವಾಗಿ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಗಮನ ಹರಿಸಿ, ಅವರಲ್ಲಿನ ಪರೀಕ್ಷಾ ಭಯವನ್ನು ಹೋಗಲಾಡಿಸುವ ಪ್ರಯತ್ನ ಮಾಡಲಾಗುತ್ತಿದೆ.
"ವಿದ್ಯಾರ್ಥಿಗಳ ಉತ್ತಮ ಫಲಿತಾಂಶವೇ ನಮ್ಮ ಮುಖ್ಯ ಗುರಿ. ರಜೆ ದಿನಗಳನ್ನೂ ಮೀಸಲಿಟ್ಟು ಅವರಿಗೆ ಸಮಗ್ರ ತರಬೇತಿ ನೀಡುತ್ತಿದ್ದೇವೆ" ಎಂದು ಮುಖ್ಯ ಶಿಕ್ಷಕ ವೀರಣ್ಣ ತಿಳಿಸಿದರು.
"ಮಾದರಿ ಪ್ರಶ್ನೆಪತ್ರಿಕೆಗಳ ಮೂಲಕ ಅಭ್ಯಾಸ ಮಾಡಿಸುವುದರಿಂದ ವಿದ್ಯಾರ್ಥಿಗಳು ಹೆಚ್ಚು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಲು ಸಾಧ್ಯವಾಗುತ್ತದೆ" ಎಂದು ವಿಜ್ಞಾನ ಶಿಕ್ಷಕ ಪ್ರದೀಪ್ ಹೇಳಿದರು.
PublicNext
20/03/2026 10:28 pm