ಚಿಕ್ಕಮಗಳೂರು: ರಾಜ್ಯ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸದೆ 56,432 ಸರ್ಕಾರಿ ಹುದ್ದೆಗಳ ನೇಮಕಾತಿಗೆ ಮುಂದಾಗಿರುವುದನ್ನು ಮಾದಿಗ ಸಂಘಟನೆಗಳ ಒಕ್ಕೂಟದ ರಾಜ್ಯ ಕಾರ್ಯದರ್ಶಿ ಚಂದ್ರಶೇಖರ್ ತೀವ್ರವಾಗಿ ಖಂಡಿಸಿದ್ದಾರೆ. ಈ ಕ್ರಮವು ಮಾದಿಗ ಮತ್ತು ಸಂಬಂಧಿತ ಉಪಜಾತಿಗಳಿಗೆ ಮಾಡಿದ ಮರಣಶಾಸನವಾಗಿದ್ದು, ಸಂವಿಧಾನಬದ್ಧ ಹಕ್ಕುಗಳನ್ನು ಹತ್ತಿಕ್ಕುವ ಪ್ರಯತ್ನವಾಗಿದೆ ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.
ಸುಪ್ರೀಂ ಕೋರ್ಟ್‌ನ ಏಳು ನ್ಯಾಯಾಧೀಶರ ಪೀಠವು ಒಳಮೀಸಲಾತಿ ಪರವಾಗಿ ಆದೇಶ ನೀಡಿ ಎರಡು ವರ್ಷಗಳೇ ಕಳೆದಿದ್ದರೂ ಮತ್ತು ನ್ಯಾ. ನಾಗಮೋಹನ್ ದಾಸ್ ಸಮಿತಿಯ ವರದಿಗೆ ಸಚಿವ ಸಂಪುಟದ ಅನುಮೋದನೆ ಸಿಕ್ಕಿದ್ದರೂ, ಸರ್ಕಾರವು ಮೀನಾಮೇಷ ಎಣಿಸುತ್ತಿರುವುದು ಅಕ್ಷಮ್ಯ ಅಪರಾಧ ಎಂದು ಅವರು ಕಿಡಿಕಾರಿದ್ದಾರೆ. ಅಧಿಕಾರಕ್ಕೆ ಬರುವ ಮುನ್ನ ಮೊದಲ ಅಧಿವೇಶನದಲ್ಲೇ ಒಳಮೀಸಲಾತಿ ಜಾರಿಗೆ ತರುವುದಾಗಿ ಭರವಸೆ ನೀಡಿದ್ದ ಕಾಂಗ್ರೆಸ್ ಸರ್ಕಾರ, ಈಗ ಎರಡೂವರೆ ವರ್ಷಗಳ ನಂತರ ತಾಂತ್ರಿಕ ಮತ್ತು ಕಾನೂನು ಅಡೆತಡೆಗಳ ನೆಪ ಹೇಳುತ್ತಿರುವುದು ಸಮುದಾಯಕ್ಕೆ ಮಾಡುತ್ತಿರುವ ದ್ರೋಹವಾಗಿದೆ ಎಂದು ಚಂದ್ರಶೇಖರ್ ದೂರಿದ್ದಾರೆ. ಬಡತನದಲ್ಲಿರುವ ಮಾದಿಗ ಮತ್ತು ಅಲೆಮಾರಿ ಸಮುದಾಯಗಳ ಆಶೋತ್ತರಗಳನ್ನು ಕಡೆಗಣಿಸಿ ಸರ್ಕಾರವು ರಾಜಕೀಯ ಷಡ್ಯಂತ್ರ ರೂಪಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಸರ್ಕಾರದ ಧೋರಣೆಯನ್ನು ಖಂಡಿಸಿ ಮಾರ್ಚ್ 25, 2026 ರಂದು ರಾಜ್ಯದ ಎಲ್ಲಾ 31 ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದ್ದು, ಸಮುದಾಯದ ಪ್ರತಿಯೊಬ್ಬರೂ ತಮ್ಮ ಹಕ್ಕಿಗಾಗಿ ಬೀದಿಗೆ ಇಳಿಯಬೇಕು ಎಂದು ಅವರು ಕರೆ ನೀಡಿದ್ದಾರೆ.
Kshetra Samachara
25/03/2026 12:27 pm
LOADING...