ಕೊಯಮತ್ತೂರು: ತಮಿಳುನಾಡಿನ ಕೊಯಮತ್ತೂರಿನಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಚಲಿಸುತ್ತಿದ್ದ ಖಾಸಗಿ ಬಸ್ಸಿನಿಂದ ಆಯತಪ್ಪಿ ಕೆಳಗೆ ಬಿದ್ದ 66 ವರ್ಷದ ವೃದ್ಧೆಯೊಬ್ಬರು ಸಾವನ್ನಪ್ಪಿದ್ದಾರೆ. ಬಸ್ಸಿನ ಒಳಗೆ ನಡೆಯುವಾಗ ಸಮತೋಲನ ತಪ್ಪಿದ ಪರಿಣಾಮ ಈ ದುರಂತ ಸಂಭವಿಸಿದ್ದು, ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯದ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಹೌದು ಮಾರ್ಚ್ 29 ರಂದು ಕೊವೈಪುದೂರ್‌ನಲ್ಲಿ ನಡೆದ ಈ ದುರ್ಘಟನೆಯಲ್ಲಿ ಮೃತಪಟ್ಟವರನ್ನು ಜಿ. ಕಾಮಾಕ್ಷಿ (66) ಎಂದು ಗುರುತಿಸಲಾಗಿದೆ. ರೂಟ್ ನಂಬರ್ S-17 ರ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಮಾಕ್ಷಿ ಅವರು, ಬಸ್ ಚಲಿಸುತ್ತಿರುವಾಗಲೇ ಒಳಗೆ ಒಂದು ಕಡೆಯಿಂದ ಮತ್ತೊಂದು ಕಡೆಗೆ ಹೋಗಲು ಯತ್ನಿಸಿದ್ದಾರೆ. ಈ ವೇಳೆ, ಬಸ್ ವೇಗವಾಗಿ ಚಲಿಸುತ್ತಿದ್ದ ಕಾರಣ ತಿರುವಿನಲ್ಲಿ ಸಮತೋಲನ ತಪ್ಪಿದ ಪರಿಣಾಮ, ಅವರು ನೇರವಾಗಿ ಬಸ್ಸಿನ ಬಾಗಿಲಿನಿಂದ ರಸ್ತೆಗೆ ಬಿದ್ದಿದ್ದಾರೆ.
ಹೀಗೆ ಬಿದ್ದ ಅವರು ತೀವ್ರವಾಗಿ ಗಾಯಗೊಂಡಿದ್ದರು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಚಲಿಸುವ ಬಸ್ಸಿನಲ್ಲಿ ಬಾಗಿಲು ಹಾಕದೆ ಇರುವುದು ಮತ್ತು ಚಾಲಕನ ಅಜಾಗರೂಕತೆಯೇ ಈ ಸಾವಿಗೆ ಕಾರಣ ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಾಲಕನ ಅತಿವೇಗ ಮತ್ತು ನಿರ್ಲಕ್ಷ್ಯಕ್ಕೆ ಮತ್ತೊಂದು ಅಮೂಲ್ಯ ಜೀವ ಬಲಿಯಾಯಿತೇ ಎಂಬ ಪ್ರಶ್ನೆಗಳು ಎದ್ದಿವೆ.
ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಬಸ್ ಚಾಲಕನ ನಿರ್ಲಕ್ಷ್ಯದ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಲಾಗುತ್ತಿದ್ದು, ಸಾರಿಗೆ ನಿಯಮಗಳ ಉಲ್ಲಂಘನೆಯಾಗಿದೆಯೇ ಎಂಬ ಕುರಿತು ತನಿಖೆ ಮುಂದುವರಿದಿದೆ.
PublicNext
03/04/2026 06:55 pm