ಬೆಂಗಳೂರು: ಮಾಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ. ಬಾಲಕೃಷ್ಣ ಅವರಿಗೆ 42ನೇ ಎಸಿಎಂಎಂ ನ್ಯಾಯಾಲಯವು ಮಹತ್ವದ ಆದೇಶ ನೀಡಿದೆ. 2018ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದ ಕಾರಣ, ಶಾಸಕ ಹೆಚ್.ಸಿ. ಬಾಲಕೃಷ್ಣ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ.
ಚುನಾವಣೆ ವೇಳೆ ಮತದಾರರಿಗೆ ಆಮಿಷ ಒಡ್ಡಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕನ ವಿರುದ್ಧ ಅಬಕಾರಿ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ (IPC) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ಹಿನ್ನೆಲೆ
2018ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ, ಹೆಚ್.ಸಿ. ಬಾಲಕೃಷ್ಣ ಅವರು ರಾಮನಗರ ತಾಲೂಕಿನ ಬಸವನಪುರ ಗ್ರಾಮದ ಬಳಿಯ ಹಿಲ್ ವ್ಯೂ ರೆಸಾರ್ಟ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಆಯೋಜಿಸಿದ್ದರು. ಈ ಸಭೆಯು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂಬ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ, ತಹಸೀಲ್ದಾರ್ ಅವರು ಫ್ಲೈಯಿಂಗ್ ಸ್ಕ್ವಾಡ್‌ಗೆ ವಿಷಯ ತಿಳಿಸಿದ್ದರು. ಮಾಹಿತಿ ಆಧರಿಸಿ ಸ್ಥಳಕ್ಕೆ ಭೇಟಿ ನೀಡಿದ ಅಬಕಾರಿ ಸಬ್ ಇನ್ಸ್‌ಪೆಕ್ಟರ್ ಸಮೇತ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು, ಹೆಚ್.ಸಿ. ಬಾಲಕೃಷ್ಣ ವೇದಿಕೆಯ ಮೇಲೆ ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ ಮಾಡುತ್ತಿರುವುದನ್ನು ಕಂಡಿದ್ದರು. ಈ ಕಾರ್ಯಕ್ರಮ ಆಯೋಜಿಸಲು ಸಂಬಂಧಪಟ್ಟ ಚುನಾವಣಾ ಅಧಿಕಾರಿಯಿಂದ ಯಾವುದೇ ಅನುಮತಿಯನ್ನು ಪಡೆಯದ ಕಾರಣ ಪ್ರಕರಣ ದಾಖಲಾಗಿತ್ತು.
ಕಾನೂನು ಕ್ರಮ ಮತ್ತು ನ್ಯಾಯಾಲಯದ ಆದೇಶ
ಇದಲ್ಲದೆ, ಹಿಲ್ ವ್ಯೂ ರೆಸಾರ್ಟ್‌ನಲ್ಲಿ ಪರವಾನಗಿ ಇಲ್ಲದೆ ಮದ್ಯಪಾನಕ್ಕೆ ವ್ಯವಸ್ಥೆ ಮಾಡಿದ್ದ ಕಾರಣ, ರೆಸಾರ್ಟ್ ಮ್ಯಾನೇಜರ್ ವಿರುದ್ಧವೂ ಕ್ರಮ ಜರುಗಿಸುವಂತೆ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಭಾರತೀಯ ದಂಡ ಸಂಹಿತೆಯ ಕಲಂ 34, ಜನತಾ ಪ್ರಾತಿನಿಧ್ಯ ಕಾಯ್ದೆಯ ಕಲಂ 171(E) ಹಾಗೂ ಕರ್ನಾಟಕ ಅಬಕಾರಿ ಕಾಯ್ದೆ-1965ರ ಕಲಂ 34, 38(A) ಅಡಿ ಈ ಕೇಸ್ ದಾಖಲಾಗಿದ್ದು, 42ನೇ ಎಸಿಎಂಎಂ ನ್ಯಾಯಾಲಯದಲ್ಲಿ ಇದರ ವಿಚಾರಣೆ ನಡೆಯುತ್ತಿತ್ತು. ಆದರೆ, ಹಾಲಿ ಶಾಸಕ ಹೆಚ್.ಸಿ. ಬಾಲಕೃಷ್ಣ ಅವರು ವಿಚಾರಣೆಗೆ ಹಾಜರಾಗದ ಕಾರಣ, ನ್ಯಾಯಾಲಯವು ಇದೀಗ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಗೊಳಿಸುವ ಮೂಲಕ ಕಠಿಣ ಕ್ರಮಕ್ಕೆ ಮುಂದಾಗಿದೆ.
PublicNext
04/04/2026 10:10 pm