ಬೆಂಗಳೂರು: ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತ ರಾಜೇಂದ್ರ ಚೋಳನ್ ಅವರು ಇಂದು ಎಂ.ಜಿ. ರಸ್ತೆಯಲ್ಲಿರುವ ಪಿ.ಯು.ಬಿ. ಕಟ್ಟಡದ ಕೆನೋಪಿ ಹಾಲ್‌ನಲ್ಲಿ ಮಹತ್ವದ ಸಭೆ ನಡೆಸಿದರು.
ಜನಗಣತಿ-2027ರ ಪೂರ್ವ ಸಿದ್ಧತೆಗಳ ಕುರಿತು ಚರ್ಚಿಸಲು ಆಯೋಜಿಸಿದ್ದ ಈ ಸಭೆಯಲ್ಲಿ, ಜನಗಣತಿ ಕಾರ್ಯಕ್ಕೆ ನಿಯೋಜಿಸಲಾದ ಚಾರ್ಜ್ ಆಫೀಸರ್‌ಗಳು, ಹೆಚ್ಚುವರಿ ಚಾರ್ಜ್ ಆಫೀಸರ್‌ಗಳು, ತಾಂತ್ರಿಕ ಸಹಾಯಕರು, ಕಾರ್ಯಪಾಲಕ ಮತ್ತು ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ಗಳು, ಕಂದಾಯ ಅಧಿಕಾರಿಗಳು, ಸಹಾಯಕ ಕಂದಾಯ ಅಧಿಕಾರಿಗಳು, ಮೌಲ್ಯಮಾಪಕರು, ಕಂದಾಯ ನಿರೀಕ್ಷಕರು, ಕಂದಾಯ ಪರಿವೀಕ್ಷಕರು, ಗಣಕಯಂತ್ರ ನಿರ್ವಾಹಕರು ಸೇರಿದಂತೆ ಎಲ್ಲ ವಿಭಾಗಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಆಯುಕ್ತರು, ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದಂತೆ, ಎಲ್ಲರೂ ಒಂದು ತಂಡವಾಗಿ ಸಮರ್ಪಕವಾಗಿ ಕರ್ತವ್ಯ ನಿರ್ವಹಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ತರಬೇತಿ ಕೇಂದ್ರಗಳ ಸ್ಥಾಪನೆ ಮತ್ತು ತಂಡ ರಚನೆ
ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ 2027ರ ರಾಷ್ಟ್ರೀಯ ಜನಗಣತಿ ಕಾರ್ಯಕ್ಕೆ ನೇಮಕಗೊಳ್ಳುವ ವಿವಿಧ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ತರಬೇತಿ ನೀಡಲು ಸಿದ್ಧತೆಗಳು ನಡೆದಿವೆ. ಇದಕ್ಕಾಗಿ ಆರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಆರು ತರಬೇತಿ ಕೇಂದ್ರಗಳನ್ನು ಗುರುತಿಸಲಾಗಿದೆ. ಈ ಕೇಂದ್ರಗಳಲ್ಲಿ ತರಬೇತಿ ನೀಡಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪ್ರತಿಯೊಂದು ತರಬೇತಿ ಕೇಂದ್ರದ ಉಸ್ತುವಾರಿಗೆ ಕಂದಾಯ ಅಧಿಕಾರಿಗಳ ನೇತೃತ್ವದಲ್ಲಿ 10 ಅಧಿಕಾರಿಗಳ ತಂಡವನ್ನು ರಚಿಸಿ ಆದೇಶ ಹೊರಡಿಸಲಾಗಿದೆ.
ಮನೆಪಟ್ಟಿ ಮತ್ತು ವಸತಿ ಗಣತಿ ಕಾರ್ಯದ ವೇಳಾಪಟ್ಟಿ
ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಜನಗಣತಿ-2027ರ ಪ್ರಮುಖ ಭಾಗವಾದ ಮನೆಪಟ್ಟಿ ಮತ್ತು ವಸತಿ ಗಣತಿ ಕಾರ್ಯದ ದಿನಾಂಕಗಳನ್ನು ಪ್ರಕಟಿಸಲಾಗಿದೆ. ಈ ಸಮೀಕ್ಷಾ ಕಾರ್ಯವು 2026ರ ಏಪ್ರಿಲ್ 16 ರಿಂದ ಮೇ 15 ರವರೆಗೆ ನಡೆಯಲಿದೆ. ಈ ಬೃಹತ್ ಕಾರ್ಯಕ್ಕೆ ಈಗಾಗಲೇ ಅಗತ್ಯವಿರುವ ಗಣತಿದಾರರು ಮತ್ತು ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ.
ಸಭೆಯ ಪ್ರಮುಖ ಗಣ್ಯರು
ಈ ಮಹತ್ವದ ಸಭೆಯಲ್ಲಿ ಅಭಿವೃದ್ಧಿ ಅಪರ ಆಯುಕ್ತ ದಲ್ಜಿತ್ ಕುಮಾರ್, ಕಂದಾಯ ಅಪರ ಆಯುಕ್ತ ಕೆ. ರಂಗನಾಥ್, ಉಪ ಆಯುಕ್ತರು ಮತ್ತು ಕಂದಾಯ ಅಧಿಕಾರಿಗಳು ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
04/04/2026 11:05 pm