ಬೆಂಗಳೂರು: ಅಸ್ಸಾಂ ವಿಧಾನಸಭಾ ಚುನಾವಣೆಯ ಪ್ರಚಾರದ ಅಖಾಡದಲ್ಲಿ ರಾಜಕೀಯ ವಾಗ್ವಾದ ತಾರಕಕ್ಕೇರಿದೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ 'ಪಾಗಲ್' ಅಥವಾ 'ಹುಚ್ಚ' ಎಂದು ಸಂಬೋಧಿಸಿರುವುದಕ್ಕೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯ ತೀವ್ರ ಆಕ್ರೋಶ
ಎಕ್ಸ್‌ನಲ್ಲಿ ಈ ಕುರಿತು ತೀವ್ರವಾಗಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಅತ್ಯಂತ ಎತ್ತರದ ದಲಿತ ನಾಯಕರಲ್ಲಿ ಒಬ್ಬರಾದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಇಂತಹ ಅವಹೇಳನಕಾರಿ ಪದಗಳಲ್ಲಿ ಅವಮಾನಿಸಿರುವುದು ಕೇವಲ ಒಬ್ಬ ವ್ಯಕ್ತಿಯ ಮೇಲಿನ ದಾಳಿಯಲ್ಲ, ಬದಲಿಗೆ ಇಡೀ ದಲಿತ ಸಮುದಾಯಕ್ಕೆ ಮಾಡಿದ ಘೋರ ಅವಮಾನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂತಹ ಹೇಳಿಕೆಗಳು ಬಿಜೆಪಿ-ಆರ್‌ಎಸ್‌ಎಸ್‌ನ ಮನುವಾದಿ ಚಿಂತನೆ ಹಾಗೂ ಧರ್ಮಾಂಧತೆಯಲ್ಲಿ ಬೇರೂರಿರುವ ಆಳವಾದ ಪ್ರತಿಗಾಮಿ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತವೆ ಎಂದು ಸಿದ್ದರಾಮಯ್ಯ ತಮ್ಮ ಪೋಸ್ಟ್‌ನಲ್ಲಿ ತೀಕ್ಷ್ಣವಾಗಿ ವಾಗ್ದಾಳಿ ನಡೆಸಿದ್ದಾರೆ.
ಕ್ಷಮೆಯಾಚನೆಗೆ ಆಗ್ರಹ ಮತ್ತು ಪ್ರಧಾನಿ ಮೌನ
ರಾಹುಲ್ ಗಾಂಧಿ ಅವರು ಈಗಾಗಲೇ ಸ್ಪಷ್ಟಪಡಿಸಿದಂತೆ, ಮುಂಬರುವ ಚುನಾವಣೆಗಳಲ್ಲಿ ಸೋಲಿನ ಭೀತಿ ಮತ್ತು ಭ್ರಷ್ಟಾಚಾರ ಪ್ರಕರಣಗಳಲ್ಲಿ ಜೈಲು ಶಿಕ್ಷೆ ಅನುಭವಿಸುವ ಸಾಧ್ಯತೆಯಿಂದಾಗಿ ಶರ್ಮಾ ತಮ್ಮ ಮಾನಸಿಕ ಸಮತೋಲನ ಕಳೆದುಕೊಂಡಂತೆ ಕಾಣುತ್ತದೆ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಹಿಮಂತ ಬಿಸ್ವಾ ಶರ್ಮಾ ಅವರು ರಾಷ್ಟ್ರ ಮತ್ತು ದಲಿತ ಸಮುದಾಯಕ್ಕೆ ಬೇಷರತ್ತಾದ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿರುವ ಸಿಎಂ ಸಿದ್ದರಾಮಯ್ಯ, ಈ ಘಟನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಮೌನವನ್ನು ಪ್ರಶ್ನಿಸಿದ್ದಾರೆ. 'ಅಂತಹ ಅವಮಾನದ ಮುಂದೆ ಮೌನವಾಗಿರುವುದು ಸಹಭಾಗಿತ್ವಕ್ಕೆ ಸಮ' ಎಂದು ಕುಟುಕಿದ್ದಾರೆ.
ಅಸ್ಸಾಂ ಸಮಾವೇಶವೊಂದರಲ್ಲಿ ಖರ್ಗೆ ಅವರು ಬಿಜೆಪಿ ಮತ್ತು ಆರ್‌ಎಸ್‌ಎಸ್ ಅನ್ನು 'ವಿಷಕಾರಿ ಹಾವು' ಎಂದು ಟೀಕಿಸಿದ್ದರು. ಇದಕ್ಕೆ ಪ್ರತಿಯಾಗಿ ಹಿಮಂತ ಬಿಸ್ವಾ ಶರ್ಮಾ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ರಾಜಕೀಯ ಜಿದ್ದಾಜಿದ್ದಿ ಮುಂದುವರಿಕೆ
ಈಗಾಗಲೇ ಚುನಾವಣಾ ಆಯೋಗ ಮತ್ತು ಪೊಲೀಸರಿಗೆ ದೂರುಗಳು ಸಲ್ಲಿಕೆಯಾಗಿದ್ದು, ಅಸ್ಸಾಂನಲ್ಲಿ ರಾಜಕೀಯ ಜಿದ್ದಾಜಿದ್ದಿ ತೀವ್ರ ಸ್ವರೂಪ ಪಡೆದುಕೊಂಡಿದೆ.
PublicNext
07/04/2026 11:12 pm