ಕೋಲಾರ ನಗರದಲ್ಲಿ ಕರ್ನಾಟಕ ರಾಜ್ಯ ಬೀಜ ನಿಗಮ ನಿರ್ಮಿಸುತ್ತಿರುವ ನೂತನ ಕಟ್ಟಡ ಕಾಮಗಾರಿಯಲ್ಲಿ ವ್ಯಾಪಕ ನಿರ್ಲಕ್ಷ್ಯದ ಆರೋಪಗಳು ಕೇಳಿಬಂದಿವೆ. ಕೋಟಿಗಟ್ಟಲೆ ವೆಚ್ಚದಲ್ಲಿ ನಡೆಯುತ್ತಿರುವ ಈ ಕಟ್ಟಡ ಕಾಮಗಾರಿಯು ಭರದಿಂದ ಸಾಗುತ್ತಿದ್ದರೂ, ಕಟ್ಟಡದ ಗೋಡೆಗಳ ನಿರ್ಮಾಣ ಹಂತದಲ್ಲೇ ಗುಣಮಟ್ಟದಲ್ಲಿ ಭಾರೀ ನಿರ್ಲಕ್ಷ್ಯ ಎದ್ದು ಕಾಣುತ್ತಿದ್ದು, ಕಾಮಗಾರಿಯ ಗುಣಮಟ್ಟ ಸಂಪೂರ್ಣವಾಗಿ ಹಳಿತಪ್ಪಿದೆ ಎಂದು ಆರೋಪಿಸಲಾಗಿದೆ.
ನಿರ್ಮಾಣ ಹಂತದಲ್ಲಿರುವ ಇಟ್ಟಿಗೆ ಗೋಡೆಗಳಲ್ಲಿ ಸಾಲುಗಳು ಏರುಪೇರಾಗಿ, ಉಬ್ಬುತಗ್ಗಾಗಿರುವುದನ್ನು ಸ್ಪಷ್ಟವಾಗಿ ಗಮನಿಸಬಹುದು. ಉತ್ತರ ಭಾರತದ ಅಕುಶಲ ಕಾರ್ಮಿಕರಿಂದ ಕೆಲಸ ಮಾಡಿಸುತ್ತಿರುವುದರಿಂದ ಗುಣಮಟ್ಟ ಕುಸಿಯಲು ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು, ಕಟ್ಟಡ ಕಾಮಗಾರಿಯು ಗುಣಮಟ್ಟದಿಂದ ಕೂಡಿರುವಂತೆ ನೋಡಿಕೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
PublicNext
22/04/2026 11:23 am