ಗುಂಡ್ಲುಪೇಟೆ ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಟಿಪ್ಪರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸಮೇತ ಲಾರಿಯ ಚಕ್ರದಡಿ ಸಿಲುಕಿದ್ದ ದಂಪತಿಗಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಪಟ್ಟಣದಲ್ಲಿ ಸಂಚಲನ ಮೂಡಿಸಿದೆ.
ತಾಲೂಕಿನ ಮಡಹಳ್ಳಿ ಗ್ರಾಮದ ಗಂಗಾಧರ್ ಮತ್ತು ಅವರ ಪತ್ನಿ ಘಟನೆಯಲ್ಲಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ದಂಪತಿಗಳು. ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗ ಹಾದು ಹೋಗುತ್ತಿದ್ದಾಗ, ಕೆಎ 51 ಎಜಿ 5577 ನೋಂದಣಿಯ ಟಿಪ್ಪರ್ ಲಾರಿ ಇವರ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ದಂಪತಿಗಳು ಬೈಕ್ ಸಮೇತ ರಸ್ತೆಗೆ ಉರುಳಿದ್ದು, ಬೈಕ್ ಟಿಪ್ಪರ್‌ನ ಮುಂಭಾಗದ ಚಕ್ರಕ್ಕೆ ಸಿಲುಕಿದೆ. ಸ್ಥಳದಲ್ಲಿದ್ದ ಸಾರ್ವಜನಿಕರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಬೈಕನ್ನು ಹೊರಗೆ ಸರಿಸಿದ ಕಾರಣ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ.
ಟಿಪ್ಪರ್ ಗುದ್ದುತ್ತಿದ್ದಂತೆ ಕೆಳಗೆ ಬಿದ್ದ ದಂಪತಿಗಳನ್ನು ರಕ್ಷಿಸಿದ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಚಾಲಕನ ಅಜಾಗರೂಕ ಚಾಲನೆಯ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಜನಸಂದಣಿಯನ್ನು ನಿಯಂತ್ರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಅಲ್ಲದೆ, ಅಪಘಾತಕ್ಕೆ ಕಾರಣವಾದ ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದು, ಚಾಲಕನ ವಿರುದ್ಧ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
Kshetra Samachara
26/04/2026 04:18 pm
LOADING...