ಶಿಡ್ಲಘಟ್ಟ : ಮಹಿಳಾ ಮೀಸಲಾತಿ ಕಾಯ್ದೆಯ ಜಾರಿಗೆ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು ಮಹಿಳಾ ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರ ಗೌಡ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಗರದ ಬಿಜೆಪಿ ಸೇವಾ ಸೌಧದ ಬಳಿಯಿಂದ ನಗರದ ಕೋಟೆ ವೃತ್ತದ ಮೂಲಕ ಕೆಎಸ್ಆರ್ಟಿಸಿ ಬಸ್ ನಿಲ್ದಾಣದವರೆಗೆ ಬೃಹತ್ ಪಾದಯಾತ್ರೆ ನಡೆಸಿ ಚಿಕ್ಕಬಳ್ಳಾಪುರಕ್ಕೆ ಹೋಗುವ ವೃತ್ತದಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದರು.
ಸ್ವಾತಂತ್ರ್ಯ ಬಂದು 7 ದಶಕಗಳು ಕಳೆದರೂ ಸಮಾನತೆಗೆ, ಮೀಸಲಾತಿಗೆ ಮಹಿಳೆಯರು ಅಂಗಲಾಚುವ ಪರಿಸ್ಥಿತಿ ಇರುವುದು ದುರಂತ. ದೇಶದ ಜನಸಂಖ್ಯೆಯ ಅರ್ಧದಷ್ಟಿದ್ದರೂ ಮಹಿಳೆಯರು ರಾಜಕೀಯ ಹಕ್ಕುಗಳಿಗೆ ಹೋರಾಟ ಮಾಡಬೇಕಾಗಿದೆ. ಅಂಬೇಡ್ಕರ್ ಮಹಿಳಾ ಪರವಾದ ಆಶಯಗಳನ್ನು ಕಾಂಗ್ರೆಸ್ ಪಕ್ಷ ಮಣ್ಣುಪಾಲು ಮಾಡುತ್ತಿದೆ ಎಂದು ಆರೋಪಿಸಿದರು.
ಮಹಿಳೆಯರಿಗೆ ಮೀಸಲಾತಿ ನೀಡುವ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಮಿತ್ರಪಕ್ಷಗಳು ಹಿಂದಿನಿಂದಲೂ ವಿರೋಧ ಮಾಡಿಕೊಂಡು ಬಂದಿದ್ದಾರೆ. 2023ರಲ್ಲಿ ಮಹಿಳಾ ಮೀಸಲಾತಿ ಬಿಲ್ ಪಾಸ್ ಆಗಿದ್ದರೂ ಜಾರಿ ಮಾಡಲು ಕಾಂಗ್ರೆಸ್ ಅಡ್ಡಗಾಲು ಹಾಕಿರುವುದು ಖಂಡನೀಯ. ಮಹಿಳಾ ವಿರೋಧಿ ಧೋರಣೆ ಅನುಸರಿಸುತ್ತಿರುವ ಕಾಂಗ್ರೆಸ್‌ಗೆ ಮುಂದಿನ ಚುನಾವಣೆಯಲ್ಲಿ ಮಹಿಳಾ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಕ್ಷೇತ್ರ ಪುನರ್‌ವಿಂಗಡಣೆಯ ಅನುಸಾರ ಮಹಿಳಾ ಮೀಸಲಾತಿ ಕಾಯ್ದೆ ಜಾರಿ ಮಾಡುವುದಕ್ಕೆ ಹಿಂದೆ ಎಲ್ಲ ಪಕ್ಷಗಳು ಒಪ್ಪಿಕೊಂಡು ಈಗ ತಗಾದೆ ತೆಗೆಯುತ್ತಿರುವುದು ಖಂಡನೀಯ. ಮಹಿಳೆಯ ಸಾಮರ್ಥ್ಯಕ್ಕೆ ವೇದಿಕೆ ನೀಡದ, ಅವಕಾಶಗಳನ್ನು ಕಸಿಯುತ್ತಿರುವ ಕಾಂಗ್ರೆಸ್ ಹಾಗೂ ಮಿತ್ರಪಕ್ಷಗಳ ನಡೆ ಖಂಡನೀಯ ಎಂದು ಟೀಕಿಸಿದರು.
ಕಾಂಗ್ರೆಸ್ ಪಕ್ಷಕ್ಕೆ ಮಹಿಳೆಯರ ಬಗ್ಗೆ ಕಾಳಜಿ ಇಲ್ಲವಾಗಿದ್ದು ಸಂಸತ್‌ನಲ್ಲಿ ಮಹಿಳಾ ಮೀಸಲಾತಿ ಕಾಯ್ದೆಗೆ ಸೋಲಾಗುವಂತೆ ಮಾಡಿದೆ. ಕಾಂಗ್ರೆಸ್ ಸಂಸದರಿಗೆ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಚಿಕ್ಕತೇಕಹಳ್ಳಿ ಡಿ ಶಿವಕುಮಾರ್ ಪಬ್ಲಿಕ್ ನೆಕ್ಸ್ಟ್ ಚಿಕ್ಕಬಳ್ಳಾಪುರ
PublicNext
27/04/2026 06:05 pm