ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೇಗುಲದಿಂದ ಮರಳುತ್ತಿದ್ದ ಕುಟುಂಬಕ್ಕೆ ಕಾದಿತ್ತು ಮೃತ್ಯು: ಭೀಕರ ಅಪಘಾತದಲ್ಲಿ ಆರು ಮಂದಿ ಸಾವು.!

ಹೈದರಾಬಾದ್: ಶುಕ್ರವಾರ ಹೈದರಾಬಾದ್ ಹೊರವಲಯದ ಔಟರ್ ರಿಂಗ್ ರಸ್ತೆಯಲ್ಲಿ (ORR) ನಿಲ್ಲಿಸಿದ್ದ ಟ್ರಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ, ಒಂದೇ ಕುಟುಂಬದ ಆರು ಮಂದಿ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದು, ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ ಭೀಕರ ಅಪಘಾತ ಶಂಶಾಬಾದ್‌ನ ORR ನಿರ್ಗಮನ 16ರ ಬಳಿ ಸಂಭವಿಸಿದೆ. ಪೊಲೀಸರ ಮಾಹಿತಿ ಪ್ರಕಾರ, ಅತಿ ವೇಗದಲ್ಲಿ ಬರುತ್ತಿದ್ದ ವ್ಯಾಗನ್ ಆರ್ ಕಾರು ನಿಂತಿದ್ದ ಟ್ರಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಟ್ರಕ್‌ನ ಅಡಿಭಾಗದಲ್ಲಿ ಸಿಲುಕಿಕೊಂಡಿದೆ. ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡರೆ, ಓರ್ವ ಮಹಿಳೆ ತೀವ್ರ ಗಾಯಗೊಂಡಿದ್ದಾರೆ. ಮೃತರ ಪೈಕಿ ಇಬ್ಬರು ಮಕ್ಕಳು ಮತ್ತು ಒಬ್ಬ ಮಹಿಳೆ ಸೇರಿದ್ದಾರೆ.

ಅಪಘಾತ ಸಂಭವಿಸಿದ ಕೂಡಲೇ ದಾರಿಹೋಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದರಿಂದ, ಅದರ ಅವಶೇಷಗಳ ನಡುವೆ ಸಿಲುಕಿಕೊಂಡಿದ್ದ ಶವಗಳನ್ನು ಹೊರತೆಗೆಯಲು ರಕ್ಷಣಾ ಕಾರ್ಯಕರ್ತರು ಹರಸಾಹಸ ಪಡಬೇಕಾಯಿತು. ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಯೊಬ್ಬರು, ಸಹಾಯಕ್ಕಾಗಿ ಅಳುತ್ತಿದ್ದ ಗಾಯಾಳು ಮಹಿಳೆಯನ್ನು ಹೊರತೆಗೆದು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಯಿತು ಎಂದು ತಿಳಿಸಿದ್ದಾರೆ. ಟ್ರಕ್‌ನ ಕೆಳಗೆ ಸಿಲುಕಿಕೊಂಡಿದ್ದ ಕಾರನ್ನು ಹೊರತೆಗೆಯಲು ಕ್ರೇನ್ ನೆರವು ಪಡೆಯಲಾಯಿತು.

ಗಾಯಾಳುಗಳ ಸ್ಥಿತಿ ಮತ್ತು ತನಿಖೆ

ಗಾಯಾಳು ಮಹಿಳೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಸ್ವಾಮ್ಯದ ಉಸ್ಮಾನಿಯಾ ಜನರಲ್ ಆಸ್ಪತ್ರೆಗೆ ರವಾನಿಸಲಾಗಿದೆ. ಚೆವೆಲ್ಲಾ ಉಪ ಪೊಲೀಸ್ ಆಯುಕ್ತ ಯೋಗೇಶ್ ಗೌತಮ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆದಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಮೃತರಾದವರೆಲ್ಲರೂ ತೆಲಂಗಾಣದ ರಾಜಣ್ಣ ಸಿರ್ಸಿಲ್ಲಾ ಜಿಲ್ಲೆಯವರಾಗಿದ್ದು, ಹೈದರಾಬಾದ್‌ನ ಸನತ್‌ನಗರದಲ್ಲಿ ವಾಸಿಸುತ್ತಿದ್ದರು. ಯಾದಗಿರಿಗುಟ್ಟ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದು ಹೈದರಾಬಾದ್‌ಗೆ ಹಿಂತಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಕಾರು ಚಾಲನೆ ಮಾಡುತ್ತಿದ್ದ ವ್ಯಕ್ತಿ ನಿದ್ರೆಗೆ ಜಾರಿದ್ದರಿಂದ ಅಪಘಾತ ಸಂಭವಿಸಿರಬಹುದು ಎಂದು ಪೊಲೀಸರು ಪ್ರಾಥಮಿಕವಾಗಿ ಶಂಕಿಸಿದ್ದಾರೆ. 158 ಕಿಲೋಮೀಟರ್ ಉದ್ದದ ORR ರಸ್ತೆಯು ಇತ್ತೀಚಿನ ದಿನಗಳಲ್ಲಿ ಮಾರಣಾಂತಿಕ ಅಪಘಾತಗಳ ಸರಣಿಗೆ ಸಾಕ್ಷಿಯಾಗುತ್ತಿದ್ದು, ರಸ್ತೆ ಬಳಕೆದಾರರಲ್ಲಿ ಆತಂಕ ಮೂಡಿಸಿದೆ. ಈ ಎಂಟು ಪಥದ ರಸ್ತೆಯಲ್ಲಿ ಕಳೆದ ಐದು ವರ್ಷಗಳಲ್ಲಿ 375ಕ್ಕೂ ಹೆಚ್ಚು ಜನರು ಅಪಘಾತಗಳಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.

Edited By : Vijay Kumar
PublicNext

PublicNext

02/05/2026 03:53 pm

Cinque Terre

6.92 K

Cinque Terre

0

ಸಂಬಂಧಿತ ಸುದ್ದಿ