ಪಶ್ಚಿಮ ಬಂಗಾಳ, ದಿನಹಾಟ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ, ಕೂಚ್‌ಬೆಹಾರ್ ಜಿಲ್ಲೆಯ ದಿನಹಾಟಾದಲ್ಲಿ ರಾಜಕೀಯ ಕಿಚ್ಚು ಹೊತ್ತಿಕೊಂಡಿದೆ. ಆರಂಭಿಕ ಟ್ರೆಂಡ್‌ಗಳಲ್ಲಿ ಬಿಜೆಪಿ ಮತ್ತು ಟಿಎಂಸಿ ನಡುವೆ ಜಿದ್ದಾಜಿದ್ದಿನ ಪೈಪೋಟಿ ಏರ್ಪಟ್ಟಿದ್ದ ಈ ಕ್ಷೇತ್ರದಲ್ಲಿ, ಮತ ಎಣಿಕೆ ಕೇಂದ್ರದ ಹೊರಗೆ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಭೀಕರ ಸಂಘರ್ಷ ನಡೆದಿದ್ದು, ಪರಿಸ್ಥಿತಿ ತೀವ್ರ ಉದ್ವಿಗ್ನಗೊಂಡಿದೆ.
ಮತ ಎಣಿಕೆ ಕೇಂದ್ರದ ಹೊರಗೆ ಜಮಾಯಿಸಿದ್ದ ಟಿಎಂಸಿ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮೊದಲು ಮಾತಿನ ಚಕಮಕಿ ಆರಂಭವಾಯಿತು. ಇದು ಕ್ಷಣಾರ್ಧದಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದು, ಉಭಯ ಪಕ್ಷಗಳ ಕಾರ್ಯಕರ್ತರು ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಪರಿಸ್ಥಿತಿ ಕೈಮೀರುತ್ತಿದ್ದಂತೆ ಸ್ಥಳೀಯ ಪೊಲೀಸರು ಮತ್ತು ಕೇಂದ್ರ ಭದ್ರತಾ ಪಡೆಗಳು ತಕ್ಷಣ ಮಧ್ಯಪ್ರವೇಶಿಸಿ, ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಿವೆ. ಸದ್ಯ ದಿನಹಾಟಾದ ಮತ ಎಣಿಕೆ ಕೇಂದ್ರದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ದಿನಹಾಟಾ ಕ್ಷೇತ್ರವು ಪಶ್ಚಿಮ ಬಂಗಾಳದ ಅತ್ಯಂತ ಸೂಕ್ಷ್ಮ ಕ್ಷೇತ್ರಗಳಲ್ಲಿ ಒಂದಾಗಿದ್ದು, ಇಲ್ಲಿನ ಫಲಿತಾಂಶದ ಮೇಲೆ ಇಡೀ ರಾಜ್ಯದ ಕಣ್ಣಿದೆ. ಸಂಘರ್ಷದ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ನಾಯಕರು, "ನಮ್ಮ ಮುನ್ನಡೆಯನ್ನು ಸಹಿಸಲಾಗದೆ ಟಿಎಂಸಿ ಗೂಂಡಾಗಳು ನಮ್ಮ ಕಾರ್ಯಕರ್ತರ ಮೇಲೆ ದಾಳಿ ಮಾಡುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ತೃಣಮೂಲ ಕಾಂಗ್ರೆಸ್, "ಬಿಜೆಪಿಯವರು ಚುನಾವಣಾ ಅಕ್ರಮ ಎಸಗಲು ಪ್ರಯತ್ನಿಸುತ್ತಿದ್ದಾರೆ, ಅದನ್ನು ತಡೆಯಲು ಮುಂದಾದ ನಮ್ಮ ಕಾರ್ಯಕರ್ತರನ್ನು ಕೆಣಕುತ್ತಿದ್ದಾರೆ" ಎಂದು ಪ್ರತ್ಯಾರೋಪ ಮಾಡಿದೆ.
ಪಶ್ಚಿಮ ಬಂಗಾಳದಾದ್ಯಂತ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸುತ್ತಿದ್ದರೂ (190+ ಸ್ಥಾನಗಳು), ಹಲವು ಕಡೆಗಳಲ್ಲಿ ದಿನಹಾಟಾದಂತಹ ಸಣ್ಣಪುಟ್ಟ ಸಂಘರ್ಷಗಳು ವರದಿಯಾಗುತ್ತಿವೆ. ಮತ ಎಣಿಕೆ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಚುನಾವಣಾ ಆಯೋಗವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ಎಲ್ಲ ರಾಜಕೀಯ ಪಕ್ಷಗಳ ಕಾರ್ಯಕರ್ತರು ಶಾಂತಿ ಕಾಪಾಡುವಂತೆ ಮನವಿ ಮಾಡಿದೆ.
PublicNext
04/05/2026 03:19 pm