ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರಿನಲ್ಲಿ ಜನೋತ್ಸವ: 2 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯ!

ತುಮಕೂರು : ತುಮಕೂರಿನಲ್ಲಿ ಮೇ 20 ರಂದು ನಡೆಯಲಿರುವ ಬೃಹತ್ ಸಮಾವೇಶ ರಾಜ್ಯ ಸರ್ಕಾರದ ಹಾಗೂ ಪಕ್ಷಾತೀತ ಸಮಾವೇಶವಾಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಮಾವೇಶದ ಪೂರ್ವಭಾವಿ ಸಭೆ ನಡೆಸಿದ ಅವರು, ಮೇ 20 ರಂದು ರಾಜ್ಯ ಸರ್ಕಾರಕ್ಕೆ 3 ವರ್ಷ ತುಂಬುತ್ತಿದೆ. ಅಲ್ಲದೆ, ತುಮಕೂರಿನಲ್ಲಿ ರಾಜ್ಯದ ಯಾವ ಜಿಲ್ಲೆಯಲ್ಲೂ ಆಗದಿರುವ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ಬೃಹತ್ ಸಮಾವೇಶವನ್ನು ತುಮಕೂರಿನಲ್ಲಿ ಆಯೋಜಿಸುತ್ತಿದ್ದು, ಇದು ಸರ್ಕಾರಿ ಕಾರ್ಯಕ್ರಮ ಹಾಗೂ ಪಕ್ಷಾತೀತ ಕಾರ್ಯಕ್ರಮವಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾವೇಶವನ್ನು ಉದ್ಘಾಟಿಸಲಿದ್ದು, ಈ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಯಿಂದ 1.85 ಲಕ್ಷ ಫಲಾನುಭವಿಗಳಿಗೆ ಕಂದಾಯ ಗ್ರಾಮದ ಹಕ್ಕುಪತ್ರಗಳು, ಪೌತಿಖಾತೆ ಸೇರಿದಂತೆ ವಿವಿಧ ಸವಲತ್ತುಗಳನ್ನು ನೀಡಲಾಗುತ್ತಿದೆ. ಅಲ್ಲದೆ, ಸುಮಾರು 80 ಸಾವಿರಕ್ಕೂ ಹೆಚ್ಚು ಮಂದಿಗೆ ವಿವಿಧ ಇಲಾಖೆಗಳ ಸವಲತ್ತುಗಳನ್ನು ವಿತರಿಸಲಾಗುತ್ತಿದೆ ಎಂದರು. ಇದೇ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಅಭೂತಪೂರ್ವ ಯೋಜನೆಗಳ ಕುರಿತು ರಾಜ್ಯ ಹಾಗೂ ಜಿಲ್ಲಾ ಮಟ್ಟದ ಪ್ರತ್ಯೇಕ ವಸ್ತುಪ್ರದರ್ಶನವನ್ನು ಹಮ್ಮಿಕೊಳ್ಳಲಾಗುತ್ತಿದೆ.

ಅಲ್ಲದೆ, ತುಮಕೂರು ಜಿಲ್ಲೆಯಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನಾ ಕಾರ್ಯಕ್ರಮಗಳು ನಡೆಯಲಿವೆ ಎಂದು ಸಚಿವರು ಮಾಹಿತಿ ನೀಡಿದರು. ಕಾರ್ಯಕ್ರಮಕ್ಕೆ 2 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳು ಆಗಮಿಸಲಿದ್ದು, ಅವರಿಗೆ ಸೂಕ್ತ ಊಟ, ಸಾರಿಗೆ ವ್ಯವಸ್ಥೆ ಕೈಗೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಯಾವುದೇ ಕೊರತೆ ಇಲ್ಲದಂತೆ ನಿರ್ವಹಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು. ಸದರಿ ಕಾರ್ಯಕ್ರಮ ಸಂಪೂರ್ಣವಾಗಿ ಸರ್ಕಾರಿ ಕಾರ್ಯಕ್ರಮವಾಗಿದ್ದು, ಇದರಲ್ಲಿ ಯಾವುದೇ ಪಕ್ಷ, ಸಂಘಟನೆ ಇರುವುದಿಲ್ಲ.

ಶಿಷ್ಟಾಚಾರದಂತೆ ಗಣ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದ್ದು, ಎಲ್ಲಾ ಆಹ್ವಾನಿತರು ಕಾರ್ಯಕ್ರಮದಲ್ಲಿ ಪಕ್ಷಭೇದ ಮರೆತು ಭಾಗವಹಿಸಬೇಕು ಹಾಗೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಅವರು ತಿಳಿಸಿದರು. ಸಭೆಯಲ್ಲಿ ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್, ಶಾಸಕರಾದ ಕೆ.ಷಡಾಕ್ಷರಿ, ಸಿ.ಬಿ. ಸುರೇಶ್ ಬಾಬು, ಬಿ. ಸುರೇಶ್‌ಗೌಡ, ಜಿ.ಬಿ. ಜ್ಯೋತಿಗಣೇಶ್, ಬಿಎಂಟಿಸಿ ನಿಗಮದ ಉಪಾಧ್ಯಕ್ಷ ನಿಕೇತ್ ರಾಜ್ ಎಂ., ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ವಿ. ಅಶ್ವಿಜ, ಮತ್ತಿತರರು ಉಪಸ್ಥಿತರಿದ್ದರು

Edited By : PublicNext Desk
Kshetra Samachara

Kshetra Samachara

06/05/2026 09:20 am

Cinque Terre

60

Cinque Terre

0

ಸಂಬಂಧಿತ ಸುದ್ದಿ