ಧಾರವಾಡ: ಕಳಸಾ-ಬಂಡೂರಿ ನಾಲಾ ಜೋಡಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಉತ್ತರ ಕರ್ನಾಟಕದ ರೈತಪರ ಸಂಘಟನೆಗಳ ವತಿಯಿಂದ ಮೇ 8 ರಂದು ದೆಹಲಿ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರೈತ ಸಂಘ ಹಾಗೂ ಹಸಿರು ಸಮಿತಿ ರಾಜ್ಯ ಉಪಾಧ್ಯಕ್ಷ ನಿಂಗಪ್ಪ ದಿವಟಗಿ ಹೇಳಿದರು.
ಧಾರವಾಡದಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದ ಸುಮಾರು 500 ರೈತರು ದೆಹಲಿಗೆ ತೆರಳಲಿದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಮೇ 12 ರಂದು ಪ್ರತಿಭಟನೆ ನಡೆಸಲಾಗುವುದು. ಧಾರವಾಡ ರೈಲು ನಿಲ್ದಾಣದಿಂದ ರೈತರು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಕರ್ನಾಟಕ ರೈತ ಸಂಘ ಮತ್ತು ಹಸಿರು ಸಮಿತಿ, ಕರ್ನಾಟಕ ರೈತರ ಸಂಘ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸಹಯೋಗದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.
ರೈತರ ಸಾಲ ಮನ್ನಾ ಮಾಡಬೇಕು. ರೈತರ ಬೆಳೆಗೆ ವೈಜ್ಞಾನಿಕ ಬೆಂಬಲ ಬೆಲೆ ಘೋಷಿಸಬೇಕು ಹಾಗೂ ಉತ್ತರ ಕರ್ನಾಟಕ ಭಾಗದ ಮಹತ್ವಾಕಾಂಕ್ಷಿ ಕಳಸಾ-ಬಂಡೂರಿ ಯೋಜನೆಯನ್ನು ಕೂಡಲೇ ಜಾರಿಗೊಳಿಸಬೇಕು ಮತ್ತು ರೈತರಿಗೆ ಉಚಿತವಾಗಿ ರಸಗೊಬ್ಬರ ಹಾಗೂ ಬಿತ್ತನೆ ಬೀಜ ವಿತರಿಸಬೇಕೆಂದು ಆಗ್ರಹಿಸಲಾಗುವುದು ಎಂದು ತಿಳಿಸಿದರು. ಈಗಾಗಲೇ ರೈತರ ಸಮಸ್ಯೆಗಳ ಬಗ್ಗೆ ರಾಜ್ಯ ಹಾಗೂ ಕೇಂದ್ರ ಸರಕಾರಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಈ ಬಾರಿ ದೆಹಲಿಯಲ್ಲಿ ಪ್ರತಿಭಟನೆ ನಡೆಸಿ ಸರಕಾರದ ಗಮನ ಸೆಳೆಯಲಾಗುವುದು ಎಂದರು.
ಈ ವೇಳೆ ರೈತ ಮುಖಂಡ ವೀರಸಿಂಗ್ ರಜಪೂತ, ಚನ್ನಮ್ಮ ಕೊಟಬಾಗಿ, ಶಂಕ್ರಮ್ಮ ತಡಕಣ್ಣವರ, ಯಲ್ಲಪ್ಪ ಗುಡಗೇರಿ, ಮಡಿವಾಳಪ್ಪ ಮಡಿವಾಳರ, ಭೀಮಸಿಂಗ್ ರಜಪೂತ, ಗೂಳಪ್ಪ ತಳವಾರ, ಗಂಗಮ್ಮ ಎಣ್ಣಿ ಇದ್ದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
06/05/2026 05:45 pm
LOADING...