ಮಡಿಕೇರಿ: ಮುಂಗಾರು ಆರಂಭದ ಹಿನ್ನೆಲೆಯಲ್ಲಿ ವಿರಾಜಪೇಟೆ ತಾಲ್ಲೂಕಿನಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ಸಭೆ ನಡೆಯಿತು. ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ಪ್ರಶಾಂತ್ ಅವರ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ಸಮಿತಿ ಹಾಗೂ ಗ್ಯಾರಂಟಿ ಸಮಿತಿಗಳ ಈ ಜಂಟಿ ಸಭೆಯಲ್ಲಿ, ಮುಂಗಾರು ಮಳೆಯಿಂದ ಉಂಟಾಗಬಹುದಾದ ಅನಾಹುತಗಳನ್ನು ತಡೆಗಟ್ಟಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.
ಮಾನ್ಸೂನ್ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ, ತಾಲ್ಲೂಕಿನ ವ್ಯಾಪ್ತಿಯಲ್ಲಿರುವ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಪೊನ್ನಂಪೇಟೆ ಹಾಗೂ ವಿರಾಜಪೇಟೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಲಾಯಿತು. ಮಳೆಗಾಲದಲ್ಲಿ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಅಧ್ಯಕ್ಷ ಪ್ರಶಾಂತ್ ಅವರು ವಿವಿಧ ಇಲಾಖೆ ಅಧಿಕಾರಿಗಳಿಗೆ ಸಲಹೆ ನೀಡಿದರು.
ವಿರಾಜಪೇಟೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ರಾಜೇಶ್ ಕೆ.ಆರ್. ಅವರು, ಸೆಸ್ಕ್ ಇಲಾಖೆಯು ಮುಂಜಾಗ್ರತಾ ಕ್ರಮವಾಗಿ ಹೆಚ್ಚಾಗಿ ಮಳೆ ಬೀಳುವ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಜಂಗಲ್ ಕಟಿಂಗ್ ಮಾಡಿಸಬೇಕು ಎಂದು ಸೂಚಿಸಿದರು. ಅಲ್ಲದೆ, ಅಂಗನವಾಡಿ ಮತ್ತು ಶಾಲೆಗಳ ಸುತ್ತಮುತ್ತ ಇರುವ ಅಪಾಯಕಾರಿ ಮರಗಳನ್ನು ಕೂಡಲೇ ತೆರವುಗೊಳಿಸಿ ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಚರಂಡಿಗಳನ್ನು ಸ್ವಚ್ಛವಾಗಿಟ್ಟುಕೊಂಡು, ಮಳೆ ನೀರು ನಿಲ್ಲದೆ ಸರಾಗವಾಗಿ ಹರಿದು ಹೋಗುವಂತೆ ಕ್ರಮವಹಿಸುವಂತೆ ಸಭೆಯಲ್ಲಿ ಸೂಚಿಸಲಾಯಿತು.
PublicNext
20/05/2026 06:55 am