ಚಳ್ಳಕೆರೆ ತಾಲ್ಲೂಕಿನ ಗೋಪನಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ರೆಡ್ಡಿಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಟ್ಯಾಂಕ್ ಅವೈಜ್ಞಾನಿಕವಾಗಿ ನಿರ್ಮಾಣಗೊಂಡಿದ್ದು, ಟ್ಯಾಂಕ್‌ನಿಂದ ನಿರಂತರವಾಗಿ ನೀರು ಸೋರಿಕೆಯಾಗುತ್ತಿರುವುದರಿಂದ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ 2021-23ನೇ ಸಾಲಿನಲ್ಲಿ ನಿರ್ಮಿಸಿರುವ ಟ್ಯಾಂಕ್ ಮೂರು ವರ್ಷ ಪೂರೈಸುವ ಮುನ್ನವೇ ಸೋರುತ್ತಿರುವುದು ಕಳಪೆ ಕಾಮಗಾರಿಯಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಟ್ಯಾಂಕ್‌ಗೆ ಸಂಪರ್ಕ ಕಲ್ಪಿಸಿರುವ ಪೈಪ್‌ಗಳಿಗೆ ಪಾಚಿ ಕಟ್ಟಿಕೊಂಡಿದ್ದು, ಕಲುಷಿತ ನೀರು ಸರಬರಾಜಾಗುತ್ತಿರುವ ಕಾರಣ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ ಎಂದು ದೂರಿದ್ದಾರೆ.
ಟ್ಯಾಂಕ್‌ನಿಂದ ನೀರು ಸೋರಿಕೆಯಾಗುತ್ತಿರುವ ಪರಿಣಾಮ ಸುತ್ತಮುತ್ತಲಿನ ಮನೆಗಳ ಗೋಡೆಗಳು ತೇವಾಂಶದಿಂದ ಹಾನಿಗೊಳಗಾಗುತ್ತಿವೆ. ಗ್ರಾಮದ ಚರಂಡಿಗಳಲ್ಲಿ ಘನ ತ್ಯಾಜ್ಯ, ಗಿಡಗಂಟಿಗಳು ತುಂಬಿಕೊಂಡು ದುರ್ವಾಸನೆ ಹರಡುತ್ತಿದ್ದು, ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗಿವೆ. ಜಾನುವಾರುಗಳ ಕುಡಿಯುವ ನೀರಿನ ತೊಟ್ಟಿಯಲ್ಲೂ ಪಾಚಿ ತುಂಬಿಕೊಂಡಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಈ ಕುರಿತು ಗ್ರಾಮ ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಗ್ರಾಮಸ್ಥರು, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
Kshetra Samachara
23/05/2026 02:27 pm
LOADING...