ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಮುಂದುವರಿದ ಅಬ್ಬರದ ಮಳೆ : ರೈತರಿಗೆ ಹವಾಮಾನ ಇಲಾಖೆಯ ಮಹತ್ವದ ಎಚ್ಚರಿಕೆ!

ಧಾರವಾಡ ಕೃಷಿ ವಿಶ್ವವಿದ್ಯಾಲಯ ಮತ್ತು ಹವಾಮಾನ ಇಲಾಖೆಯ ವರದಿಯ ಪ್ರಕಾರ, ಮುಂಗಾರು ಮಳೆಯು ಮುಂದಿನ ಮೂರು ದಿನಗಳಲ್ಲಿ ಕೇರಳವನ್ನು ತಲುಪುವ ಸಾಧ್ಯತೆಯಿದೆ. ಜೂನ್ 1ರಂದು ಮುಂಗಾರು ಕರ್ನಾಟಕ ರಾಜ್ಯಕ್ಕೆ ಪ್ರವೇಶಿಸುವ ನಿರೀಕ್ಷೆಯಿದೆ.

ಇನ್ನು, ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಮುಂದುವರಿದಿದೆ. ಕಳೆದ ರಾತ್ರಿಯಿಂದಲೇ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಮುಂದಿನ ಮೂರು ದಿನಗಳ ಕಾಲ ರಾಜ್ಯದ ಉತ್ತರ ಭಾಗದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ, ಕೃಷಿ ಚಟುವಟಿಕೆಗಳಲ್ಲಿ ತೊಡಗಿರುವ ರೈತರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.

ಮೇ 24ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯಾದಗಿರಿ, ರಾಯಚೂರು, ಬಾಗಲಕೋಟೆ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ರಾಮನಗರ, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಈ ರೀತಿಯ ವಾತಾವರಣ ಕಂಡುಬರಲಿದೆ.

ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮವಾಗಿ, ಬಾಗಲಕೋಟೆ, ಗದಗ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ.

Edited By :
PublicNext

PublicNext

24/05/2026 04:03 pm

Cinque Terre

9.28 K

Cinque Terre

0