ಭಟ್ಕಳ: ಭಟ್ಕಳ ನಗರದ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ-66ರ ಅಗಲೀಕರಣ ಹಾಗೂ ಅಭಿವೃದ್ಧಿ ಕಾಮಗಾರಿ ವೇಳೆ ಅಮ್ಮನವರ ಹೊರೆಯನ್ನಿಡಲು ನಿರ್ಮಿಸಲಾಗುತ್ತಿದ್ದ ಸಂರಚನೆ ಧ್ವಂಸಗೊಂಡ ಘಟನೆಗೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲಾಡಳಿತ ಮಹತ್ವದ ಸ್ಪಷ್ಟನೆ ನೀಡಿದೆ.
ಮೂಲ ಮುರಿನಕಟ್ಟೆಗೆ ಯಾವುದೇ ಧಕ್ಕೆಯಾಗಿಲ್ಲ ಎಂದು ಪುನರುಚ್ಚರಿಸಿರುವ ಜಿಲ್ಲಾಡಳಿತ, ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುಳ್ಳು ಸುದ್ದಿಗಳನ್ನು ಸಾರ್ವಜನಿಕರು ನಂಬಬಾರದು ಎಂದು ಮನವಿ ಮಾಡಿದೆ. ವದಂತಿ ಹಬ್ಬಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿಯೂ ಎಚ್ಚರಿಕೆ ನೀಡಿದೆ.
ಜಿಲ್ಲಾಡಳಿತ ಹೊರಡಿಸಿರುವ ಪ್ರಕಟಣೆಯ ಪ್ರಕಾರ, ರಾಷ್ಟ್ರೀಯ ಹೆದ್ದಾರಿ-66 ಅಗಲೀಕರಣ ಮತ್ತು ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಅಮ್ಮನವರ ಹೊರೆಯನ್ನಿಡುವ ಉದ್ದೇಶದಿಂದ NHAI ವತಿಯಿಂದ ಮೇ 24ರಂದು ಸರ್ಕಾರಿ ಜಾಗದಲ್ಲಿ ಕೆಂಪು ಕಲ್ಲಿನ ಸಂರಚನೆಯೊಂದನ್ನು ನಿರ್ಮಿಸಲಾಗುತ್ತಿತ್ತು. ಈ ವೇಳೆ, ಕೆಲ ಕಿಡಿಗೇಡಿಗಳು ಆ ಸಂರಚನೆಯನ್ನು ಧ್ವಂಸಗೊಳಿಸಿರುವುದು ವರದಿಯಾಗಿದೆ. ಈ ಸಂಬಂಧ ಈಗಾಗಲೇ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಅಷ್ಟೇ ಅಲ್ಲದೆ, ಸಾಂಪ್ರದಾಯಿಕವಾಗಿ ಅಮ್ಮನವರ ಹೊರೆಯನ್ನಿಡಲಾಗುತ್ತಿರುವ ಮೂಲ ಮುರಿನಕಟ್ಟೆ ಯಥಾಸ್ಥಿತಿಯಲ್ಲಿದ್ದು, ಆ ಸ್ಥಳಕ್ಕೆ ಯಾವುದೇ ರೀತಿಯ ಹಾನಿಯಾಗಿಲ್ಲ ಎಂಬುದನ್ನು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.
ಆದರೆ, ಕೆಲವು ಸಮಾಜಘಾತುಕ ಶಕ್ತಿಗಳು ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಹಾಗೂ ಸುಳ್ಳು ಮಾಹಿತಿಯನ್ನು ಹರಿಬಿಟ್ಟು, ಮೂಲ ಮುರಿನಕಟ್ಟೆಗೆ ಹಾನಿಯಾಗಿದೆ ಎಂಬ ರೀತಿಯಲ್ಲಿ ಸುದ್ದಿಗಳನ್ನು ಪ್ರಸಾರ ಮಾಡುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದೆ. ಇದರಿಂದ ಸಾರ್ವಜನಿಕರಲ್ಲಿ ಅನಗತ್ಯ ಗೊಂದಲ ಮತ್ತು ಆತಂಕ ಸೃಷ್ಟಿಯಾಗುವ ಸಾಧ್ಯತೆ ಇರುವುದರಿಂದ ಇಂತಹ ವದಂತಿಗಳನ್ನು ಯಾರೂ ನಂಬಬಾರದು ಎಂದು ಜಿಲ್ಲಾಡಳಿತ ಮತ್ತೊಮ್ಮೆ ಮನವಿ ಮಾಡಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಪೋಸ್ಟ್ ಮಾಡಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನ ಮಾಡಿದವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಅವರು ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ.
PublicNext
26/05/2026 10:53 pm