ಬೆಳಗಾವಿ: ಕರ್ನಾಟಕ ಸರ್ಕಾರ ಇತ್ತೀಚೆಗೆ ಘೋಷಿಸಿರುವ ಕನಿಷ್ಠ ವೇತನ ಹೆಚ್ಚಳದ ತಿದ್ದುಪಡಿ ಆದೇಶವನ್ನು ವಿರೋಧಿಸಿ ಬೆಳಗಾವಿಯ ವಿವಿಧ ವ್ಯಾಪಾರ ಮತ್ತು ಕೈಗಾರಿಕಾ ಸಂಘಟನೆಗಳು ಜೂನ್ 1ರಂದು ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಿವೆ.
ಮೇ 29ರಂದು ಉದ್ಯಮಬಾಗದ ಚೆಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ ಸಭಾಭವನದಲ್ಲಿ ನಡೆದ ಎಲ್ಲಾ ವ್ಯಾಪಾರ ಮತ್ತು ಕೈಗಾರಿಕಾ ಸಂಘಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಜಂಟಿ ಸಭೆಯಲ್ಲಿ ಈ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಸರ್ಕಾರದ ಕ್ರಮದ ವಿರುದ್ಧ ಜಿಲ್ಲಾಡಳಿತದ ಮೂಲಕ ಆಕ್ಷೇಪಣೆ ಸಲ್ಲಿಸಲು ನಿರ್ಧರಿಸಲಾಗಿದೆ.
ಜೂನ್ 1ರಂದು (ಸೋಮವಾರ) ಬೆಳಿಗ್ಗೆ 10.30 ಗಂಟೆಗೆ ನಗರದ ಚನ್ನಮ್ಮ ವೃತ್ತದ ಬಳಿ ಇರುವ ಕನ್ನಡ ಸಾಹಿತ್ಯ ಭವನದಲ್ಲಿ ಎಲ್ಲಾ ವ್ಯಾಪಾರಿಗಳು, ಉದ್ಯಮಿಗಳು ಹಾಗೂ ಸಂಘಟನೆಗಳ ಸದಸ್ಯರು ಒಗ್ಗೂಡಿ ಸಭೆ ನಡೆಸಲಿದ್ದಾರೆ. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಿದ್ದಾರೆ.
ಕನಿಷ್ಠ ವೇತನ ಹೆಚ್ಚಳದಿಂದ ವ್ಯಾಪಾರ, ಕೈಗಾರಿಕೆ ಹಾಗೂ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳಲಿದ್ದು, ಈ ನಿರ್ಧಾರವನ್ನು ಮರುಪರಿಶೀಲಿಸುವಂತೆ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ವಾಣಿಜ್ಯೋದ್ಯಮ ಸಂಘದ ಅಧ್ಯಕ್ಷ ಪ್ರಭಾಕರ ನಾಗರಮುನೋಳಿ ಮತ್ತು ಕಾರ್ಯದರ್ಶಿ ಸತೀಶ್ ಕುಲಕರ್ಣಿ ತಿಳಿಸಿದ್ದಾರೆ.
ಪ್ರತಿಭಟನೆ ಯಶಸ್ವಿಗೊಳಿಸಲು ಜಿಲ್ಲೆಯ ಎಲ್ಲ ವ್ಯಾಪಾರ ಮತ್ತು ಕೈಗಾರಿಕಾ ಸಂಘಗಳ ಸದಸ್ಯರು ಕಡ್ಡಾಯವಾಗಿ ಭಾಗವಹಿಸುವಂತೆ ಕರೆ ನೀಡಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ವ್ಯಾಪಾರ ಮತ್ತು ಕೈಗಾರಿಕಾ ವಲಯದ ಏಕತೆ ಹಾಗೂ ಸಾಮೂಹಿಕ ವಿರೋಧವನ್ನು ಸರ್ಕಾರದ ಗಮನಕ್ಕೆ ತರಬೇಕೆಂದು ಮನವಿ ಮಾಡಿದ್ದಾರೆ.
PublicNext
30/05/2026 08:33 pm
LOADING...