ಧಾರವಾಡ: ರಾಜ್ಯ ಸರ್ಕಾರ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವಂತೆ ಆಗ್ರಹಿಸಿ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ಹೋರಾಟ ಮಾಡುತ್ತಲೇ ಬಂದಿದ್ದರೂ ಸರ್ಕಾರ ಕೂಡ ಅಧಿಕೃತವಾಗಿ ಯಾವುದೇ ಹುದ್ದೆ ನೇಮಕಾತಿಗೆ ಅಧಿಸೂಚನೆ ಹೊರಡಿಸಿಲ್ಲ. ಹೀಗಾಗಿ ಹೈಕೋರ್ಟ್ ವಕೀಲರ ಸಂಘದ ಅಧ್ಯಕ್ಷ ಬಿ.ಡಿ.ಹಿರೇಮಠ ನೇತೃತ್ವದಲ್ಲಿ ಉದ್ಯೋಗಾಕಾಂಕ್ಷಿಗಳು ಸತ್ಯಪ್ರತಿಪಾದನಾ ಸತ್ಯಾಗ್ರಹದ ಹೆಸರಿನಲ್ಲಿ ಮತ್ತೊಂದು ಸುತ್ತಿನ ಹೋರಾಟಕ್ಕೆ ಅಣಿಯಾಗಿದ್ದರು. ಆದರೆ, ಇದಕ್ಕೂ ಪೊಲೀಸರು ಇದೀಗ ಬ್ರೇಕ್ ಹಾಕಿದ್ದಾರೆ.
ಧಾರವಾಡದ ಮಿಚಿಗನ್ ಕಾಂಪೌಂಡ್‌ನಲ್ಲಿ ಜೂನ್ 3 ರಂದು ಹೋರಾಟ ನಡೆಸಲು ಸಿದ್ಧತೆ ಮಾಡಿಕೊಂಡಿದ್ದ ಹೋರಾಟಗಾರರು ಸರ್ಕಾರದ ಗಮನ ಸೆಳೆಯಲು ಯೋಜನೆ ರೂಪಿಸಿದ್ದರು. ಆದರೆ ಪೊಲೀಸ್ ಇಲಾಖೆ ಮತ್ತೊಮ್ಮೆ ಇವರ ಹೋರಾಟಕ್ಕೆ ಅನುಮತಿ ನಿರಾಕರಿಸಿದೆ. ಹಲವು ಕಂಡೀಷನ್ ಹಾಕಿ ಹೋರಾಟಕ್ಕೆ ಅನುಮತಿ ಕೇಳಿದ್ದ ಹೋರಾಟಗಾರರು ಮತ್ತು ಪೊಲೀಸರ ನಡುವಿನ ಈ ಮುಸುಕಿನ ಗುದ್ದಾಟ ಮತ್ತೆ ಮುಂದುವರೆದಿದೆ. ಹೀಗಾಗಿ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಮತ್ತೆ ಬ್ರೇಕ್ ಬಿದ್ದಿದೆ.
ಹಿಂದಿನ ಕೆಲವು ಘಟನೆಗಳು ಹಾಗೂ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಹೋರಾಟಕ್ಕೆ ಅನುಮತಿ ನೀಡಿಲ್ಲ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸ್ಪಷ್ಟಪಡಿಸಿದ್ದಾರೆ. ಹೋರಾಟಗಾರರ ಬೇಡಿಕೆಗಳ ಬಗ್ಗೆ ಯಾವುದೇ ವಿರೋಧವಿಲ್ಲ, ಆದರೆ ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಹಿರಿಯ ಹೋರಾಟಗಾರ ಹಾಗೂ ಹೈಕೋರ್ಟ್ ವಕೀಲರ ಸಂಘದ ಅಧ್ಯಕ್ಷ ಬಿ.ಡಿ.ಹಿರೇಮಠ, ರಾಜ್ಯದ 31 ಜಿಲ್ಲೆಗಳ ವಿದ್ಯಾರ್ಥಿ ಮುಖಂಡರೊಂದಿಗೆ ಸರ್ಕಾರ ಚರ್ಚೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಖಾಲಿ ಹುದ್ದೆಗಳ ಭರ್ತಿ ಹಾಗೂ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸ್ಪಷ್ಟ ನಿಲುವು ಪ್ರಕಟಿಸುವಂತೆ ಆಗ್ರಹಿಸಿದ್ದಾರೆ. ಜೂನ್ 9 ರೊಳಗೆ ಸರ್ಕಾರ ವಿದ್ಯಾರ್ಥಿ ಮುಖಂಡರೊಂದಿಗೆ ಚರ್ಚೆ ನಡೆಸದಿದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಸತ್ಯಪ್ರತಿಪಾದನಾ ಸತ್ಯಾಗ್ರಹ ಆರಂಭಿಸುವುದಾಗಿ ಬಿ.ಡಿ. ಹಿರೇಮಠ ಎಚ್ಚರಿಕೆ ನೀಡಿದ್ದಾರೆ.
ಒಟ್ಟಿನಲ್ಲಿ ಒಂದು ಕಡೆ ಕಾನೂನು ಸುವ್ಯವಸ್ಥೆಯ ಕಾರಣ ನೀಡಿ ಪೊಲೀಸರು ಹೋರಾಟಕ್ಕೆ ಅನುಮತಿ ನಿರಾಕರಿಸಿದ್ದರೆ, ಮತ್ತೊಂದೆಡೆ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ವಿದ್ಯಾರ್ಥಿಗಳು ಬೃಹತ್ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಜೂನ್ 9 ರೊಳಗೆ ಸರ್ಕಾರ ಯಾವ ಕ್ರಮ ಕೈಗೊಳ್ಳಲಿದೆ ಮತ್ತು ವಿದ್ಯಾರ್ಥಿಗಳ ಬೇಡಿಕೆಗೆ ಹೇಗೆ ಸ್ಪಂದಿಸಲಿದೆ ಎಂಬುದು ಈಗ ಕುತೂಹಲ ಮೂಡಿಸಿದೆ.
-ಪ್ರವೀಣ ಓಂಕಾರಿ, ಪಬ್ಲಿಕ್ ನೆಕ್ಸ್ಟ್, ಧಾರವಾಡ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
02/06/2026 01:19 pm