ಭಟ್ಕಳ: ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ-2026 (ಎಸ್‌ಐಆರ್) ಕಾರ್ಯವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಭಟ್ಕಳ-ಹೊನ್ನಾವರ ವಿಧಾನಸಭಾ ಕ್ಷೇತ್ರದ ವಿವಿಧ ರಾಜಕೀಯ ಪಕ್ಷಗಳ ಅಧ್ಯಕ್ಷರು ಹಾಗೂ ಪ್ರಮುಖರೊಂದಿಗೆ ಮಂಗಳವಾರ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸಲಾಯಿತು.ಮತದಾರರ ನೋಂದಣಾಧಿಕಾರಿಗಳು ಹಾಗೂ ಉಪವಿಭಾಗಾಧಿಕಾರಿ ಜಿ. ಮಹೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಸಂಬಂಧಿಸಿದ ಪೂರ್ವಸಿದ್ಧತೆಗಳು, ಪರಿಷ್ಕರಣೆಯ ವೇಳಾಪಟ್ಟಿ, ಬೂತ್ ಮಟ್ಟದ ಅಧಿಕಾರಿಗಳ (ಬಿಎಲ್‌ಒ) ಕರ್ತವ್ಯಗಳು ಹಾಗೂ ಬೂತ್ ಮಟ್ಟದ ಏಜೆಂಟರ (ಬಿಎಲ್‌ಎ) ಪಾತ್ರ ಮತ್ತು ಜವಾಬ್ದಾರಿಗಳ ಕುರಿತು ಸವಿಸ್ತಾರವಾಗಿ ಚರ್ಚಿಸಲಾಯಿತು.
ಮತದಾರರ ಪಟ್ಟಿಯನ್ನು ನಿಖರ,ಪಾರದರ್ಶಕ ಹಾಗೂ ದೋಷರಹಿತವಾಗಿ ಸಿದ್ಧಪಡಿಸುವ ಉದ್ದೇಶದಿಂದ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಮತ್ತು ಚುನಾವಣಾ ಸಿಬ್ಬಂದಿಗಳ ನಡುವೆ ಸಮನ್ವಯ ಅಗತ್ಯವಾಗಿದ್ದು,ಈ ನಿಟ್ಟಿನಲ್ಲಿ ಎಲ್ಲ ಪಕ್ಷಗಳು ಸಹಕಾರ ನೀಡುವಂತೆ ಅಧಿಕಾರಿಗಳು ಮನವಿ ಮಾಡಿದರು. ಹೊಸ ಮತದಾರರ ಹೆಸರು ಸೇರ್ಪಡೆ,ಮತದಾರರ ವಿವರಗಳ ತಿದ್ದುಪಡಿ, ಸ್ಥಳಾಂತರಗೊಂಡಿರುವ ಮತದಾರರ ಮಾಹಿತಿಯ ನವೀಕರಣ ಸೇರಿದಂತೆ ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ಮಾಹಿತಿ ನೀಡಲಾಯಿತು.ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಬಿಎಲ್‌ಒಗಳು ಮನೆಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದು, ಬಿಎಲ್‌ಎಗಳು ಸಹ ಅಗತ್ಯ ದಾಖಲೆಗಳು ಹಾಗೂ ಮಾಹಿತಿಯನ್ನು ಒದಗಿಸುವ ಮೂಲಕ ಸಹಕರಿಸಬೇಕೆಂದು ಸೂಚಿಸಲಾಯಿತು.ಮತದಾರರ ಪಟ್ಟಿಯ ಗುಣಮಟ್ಟ ಹೆಚ್ಚಿಸುವಲ್ಲಿ ರಾಜಕೀಯ ಪಕ್ಷಗಳ ಪಾತ್ರ ಮಹತ್ವದ್ದಾಗಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.
ಸಭೆಯಲ್ಲಿ ತಹಶೀಲ್ದಾರ ನಾಗೇಂದ್ರ ಕೋಳಶೆಟ್ಟಿ,ಚುನಾವಣೆ ವಿಭಾಗದ ಶಿರಸ್ತೇದಾರ್ ರಾಧಿಕಾ ಶಾಸ್ತ್ರೀಯ,ಕಚೇರಿ ಸಿಬ್ಬಂದಿಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು. ಸಭೆಯಲ್ಲಿ ಪಕ್ಷಗಳ ಮುಖಂಡರು ತಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಹಂಚಿಕೊಂಡರು. ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಪರಿಷ್ಕರಣೆ ಕಾರ್ಯವನ್ನು ಯಶಸ್ವಿಯಾಗಿ ನಡೆಸಲು ಎಲ್ಲರೂ ಸಹಕರಿಸುವಂತೆಅಧಿಕಾರಿಗಳು ಹೇಳಿದರು.
Kshetra Samachara
02/06/2026 05:27 pm