ಬೆಳಗಾವಿ : ರಾಜ್ಯ ರಾಜಕೀಯದಲ್ಲಿ ಐತಿಹಾಸಿಕ ಕ್ಷಣವೆಂದು ಪರಿಗಣಿಸಲಾಗುತ್ತಿರುವ ಸನ್ಮಾನ್ಯ ಡಿ.ಕೆ. ಶಿವಕುಮಾರ್ ಅವರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಸಮಾರಂಭವನ್ನು ಸಾರ್ವಜನಿಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಒಟ್ಟಾಗಿ ವೀಕ್ಷಿಸಲು ಬೆಳಗಾವಿಯಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿದೆ.
ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಅವರ ನೇತೃತ್ವದಲ್ಲಿ ನಗರದ ಕಾಂಗ್ರೆಸ್ ಭವನದ ಎದುರು ಬೃಹತ್ ಎಲ್ಇಡಿ ಪರದೆ ಅಳವಡಿಸಲಾಗಿದ್ದು, ಬುಧವಾರ ಮಧ್ಯಾಹ್ನ 3 ಗಂಟೆಯಿಂದ ಪ್ರಮಾಣವಚನ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆಗೆ ವ್ಯವಸ್ಥೆ ಕಲ್ಪಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಬೆಳಗಾವಿ ನಗರ ಹಾಗೂ ಗ್ರಾಮೀಣ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಮತ್ತು ಅಭಿಮಾನಿಗಳು ಭಾಗವಹಿಸುವ ನಿರೀಕ್ಷೆಯಿದೆ.
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸುತ್ತಿರುವ ಈ ಐತಿಹಾಸಿಕ ಕ್ಷಣವನ್ನು ಸಂಭ್ರಮದಿಂದ ಆಚರಿಸಲು ಪಕ್ಷದ ಕಾರ್ಯಕರ್ತರು ಈಗಾಗಲೇ ಸಿದ್ಧತೆಗಳನ್ನು ಕೈಗೊಂಡಿದ್ದಾರೆ. ನೇರ ಪ್ರಸಾರದ ವೇಳೆ ಕಾರ್ಯಕರ್ತರು ಪಕ್ಷದ ಧ್ವಜಗಳು ಹಾಗೂ ಬ್ಯಾನರ್‌ಗಳೊಂದಿಗೆ ಭಾಗವಹಿಸಿ ಸಂಭ್ರಮಾಚರಣೆ ನಡೆಸಲಿದ್ದಾರೆ.
ಪ್ರಮಾಣವಚನ ಸಮಾರಂಭದ ನೇರ ಪ್ರಸಾರ ಮುಗಿದ ಬಳಿಕ ಕಾಂಗ್ರೆಸ್ ಭವನದಿಂದ ನಗರದ ಚನ್ನಮ್ಮ ವೃತ್ತದವರೆಗೆ ಮೆರವಣಿಗೆ ಆಯೋಜಿಸಲಾಗಿದೆ. ಮೆರವಣಿಗೆಯಲ್ಲಿ ಸಾವಿರಾರು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.
ಚನ್ನಮ್ಮ ವೃತ್ತದಲ್ಲಿ ವಿಶೇಷ ವಿಜಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅಲ್ಲಿ ಡಿ.ಕೆ. ಶಿವಕುಮಾರ್ ಅವರ ಬೃಹತ್ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ನೆರವೇರಿಸಲಾಗುವುದು. ಜೊತೆಗೆ ಸಿಹಿ ಹಂಚಿ, ಸಂಭ್ರಮಾಚರಣೆ ಮೂಲಕ ಹೊಸ ಸರ್ಕಾರಕ್ಕೆ ಶುಭ ಹಾರೈಸಲಾಗುವುದು.
ಡಿ.ಕೆ. ಶಿವಕುಮಾರ್ ಅವರ ಪ್ರಮಾಣವಚನ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಈಗಾಗಲೇ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಬುಧವಾರ ನಗರದಲ್ಲಿ ಭರ್ಜರಿ ಸಂಭ್ರಮಾಚರಣೆ ನಡೆಯುವ ಸಾಧ್ಯತೆ ಇದೆ.
PublicNext
03/06/2026 07:56 am
LOADING...