ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಳೆಗಾಲದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಿ ; ಚಂದ್ರಶೇಖರ ಬಿ ಕಂದಕೂರ

ಗದಗ: ಮಳೆಗಾಲದ ಸಂದರ್ಭದಲ್ಲಿ ಗ್ರಾಮದಲ್ಲಿ ಸ್ವಚ್ಛತೆ ಮತ್ತು ಸಾರ್ವಜನಿಕ ಆರೋಗ್ಯ ರಕ್ಷಣೆ ಅತ್ಯಂತ ಮಹತ್ವದ್ದಾಗಿದ್ದು, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಕೈಗೊಳ್ಳಬೇಕು ಎಂದು ರೋಣ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಹೊಳೆ ಆಲೂರು ಗ್ರಾಮ ಪಂಚಾಯತಿ ಆಡಳಿತ ಅಧಿಕಾರಿಗಳಾದ ಚಂದ್ರಶೇಖರ ಬಿ. ಕಂದಕೂರ ಹೇಳಿದರು..

ಹೊಳೆ ಆಲೂರ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಆಯೋಜಿಸಿದ್ದ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಮಳೆಗಾಲದಲ್ಲಿ ಚರಂಡಿಗಳಲ್ಲಿ ನೀರು ನಿಲ್ಲುವುದು, ಕಸ ಸಂಗ್ರಹವಾಗುವುದು ಹಾಗೂ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಗ್ರಾಮಗಳಲ್ಲಿ ನಿರಂತರ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳುವುದು ಅಗತ್ಯವಾಗಿದೆ ಎಂದು ತಿಳಿಸಿದರು.

ಗ್ರಾಮದ ಮುಖ್ಯ ರಸ್ತೆ, ಬೀದಿಗಳು, ಚರಂಡಿಗಳು, ಸಾರ್ವಜನಿಕ ಸ್ಥಳಗಳು ಹಾಗೂ ಕುಡಿಯುವ ನೀರಿನ ಮೂಲಗಳ ಸುತ್ತಮುತ್ತ ಸ್ವಚ್ಛತೆ ಕಾಪಾಡುವ ಮೂಲಕ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ಹರಡುವಿಕೆಯನ್ನು ತಡೆಯಬಹುದು ಎಂದು ಹೇಳಿದರು. ಗ್ರಾಮ ಪಂಚಾಯತಿ ಸಿಬ್ಬಂದಿಗಳು ಹಾಗೂ ಸ್ವಚ್ಛತಾಗಾರರು ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸುವ ಮೂಲಕ ಸ್ವಚ್ಛ ಮತ್ತು ಆರೋಗ್ಯಕರ ಗ್ರಾಮ ನಿರ್ಮಾಣಕ್ಕೆ ಸಹಕರಿಸಬೇಕು ಹೇಳಿದರು.

ಸ್ವಚ್ಛತಾಗಾರರ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಿದ ಅವರು, ಸ್ವಚ್ಛತಾ ಕಾರ್ಯಗಳಲ್ಲಿ ತೊಡಗುವ ಎಲ್ಲಾ ಸಿಬ್ಬಂದಿಗಳು ಕಡ್ಡಾಯವಾಗಿ ಗ್ಲೌಸ್, ಬೂಟು, ಮಾಸ್ಕ್, ಸುರಕ್ಷತಾ ಜಾಕೆಟ್ ಸೇರಿದಂತೆ ಅಗತ್ಯ ಸುರಕ್ಷತಾ ಪರಿಕರಗಳನ್ನು ಧರಿಸಿ ಕರ್ತವ್ಯ ನಿರ್ವಹಿಸಬೇಕು ಎಂದು ಸೂಚಿಸಿದರು. ಸುರಕ್ಷತಾ ಕ್ರಮಗಳನ್ನು ಪಾಲಿಸುವುದರಿಂದ ಸೋಂಕು ಹಾಗೂ ಅಪಘಾತಗಳಿಂದ ರಕ್ಷಣೆ ಪಡೆಯಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಸಭೆಯಲ್ಲಿ ಗ್ರಾಮ ಪಂಚಾಯತಿಯ ಅಭಿವೃದ್ಧಿ ಕಾರ್ಯಗಳು, ಸ್ವಚ್ಛ ಭಾರತ ಮಿಷನ್ ಯೋಜನೆಯ ಅನುಷ್ಠಾನ, ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ, ಕಸ ವಿಂಗಡಣೆ, ಚರಂಡಿಗಳ ನಿರ್ವಹಣೆ ಹಾಗೂ ಸಾರ್ವಜನಿಕ ಆರೋಗ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (PDO) ಬಸವರಾಜ ಗಿರಿತಮ್ಮನ್ನವರ ಅವರು ಗ್ರಾಮ ಪಂಚಾಯತಿ ಸಿಬ್ಬಂದಿಗಳು ಹಾಗೂ ಸ್ವಚ್ಛತಾಗಾರರಿಗೆ ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು. ಗ್ರಾಮದಲ್ಲಿ ಸ್ವಚ್ಛತಾ ಕಾರ್ಯಗಳನ್ನು ನಿಯಮಿತವಾಗಿ ಕೈಗೊಳ್ಳುವುದು, ಸಾರ್ವಜನಿಕರಿಂದಲೂ ಸ್ವಚ್ಛತೆಗೆ ಸಹಕಾರ ಪಡೆಯುವುದು, ಕಸವನ್ನು ಎಲ್ಲೆಂದರಲ್ಲಿ ಎಸೆಯದಂತೆ ಜಾಗೃತಿ ಮೂಡಿಸುವುದು ಹಾಗೂ ಮಳೆಗಾಲದಲ್ಲಿ ವಿಶೇಷ ಸ್ವಚ್ಛತಾ ಅಭಿಯಾನಗಳನ್ನು ಹಮ್ಮಿಕೊಳ್ಳುವಂತೆ ತಿಳಿಸಿದರು. ಸಭೆಯಲ್ಲಿ ಗ್ರಾಮ ಪಂಚಾಯತಿ ಸಿಬ್ಬಂದಿ, ಸ್ವಚ್ಛತಾಗಾರರು ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

Edited By : PublicNext Desk
Kshetra Samachara

Kshetra Samachara

03/06/2026 08:39 pm

Cinque Terre

18.02 K

Cinque Terre

0

ಸಂಬಂಧಿತ ಸುದ್ದಿ