ಬೆಂಗಳೂರು : ಗ್ರಾಮೀಣ ಮತ್ತು ಪಾರಂಪರಿಕ ಕ್ರೀಡೆಗಳಿಗೆ ಹೆಚ್ಚಿನ ಆದ್ಯತೆ ನೀಡುವ ಯುವಕರಿಗೆ ಉತ್ತೇಜನ ನೀಡಬೇಕು ಎಂದು ಡಿಸಿಎಂ ಡಾ. ಜಿ.ಪರಮೇಶ್ವರ ಅವರು ಹೇಳಿದರು.
ವಿಧಾನಸೌಧದಲ್ಲಿ ಇಂದು ನಡೆದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮುಜರಾಯಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ, ಅಧಿಕಾರಿಗಳೊಂದಿಗೆ ಸುದೀರ್ಘವಾಗಿ ಚರ್ಚಿಸಿದರು. ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಸೂಚನೆ ನೀಡಿದರು.
ಗ್ರಾಮೀಣ ಭಾಗದಲ್ಲಿ ಅನೇಕ ಪ್ರತಿಭಾವಂತ ಕ್ರೀಡಾಪಟುಗಳಿದ್ದು, ಅವರಿಗೆ ಸೂಕ್ತ ತರಬೇತಿ, ಆರ್ಥಿಕ ನೆರವು ಮತ್ತು ಸ್ಪರ್ಧಾತ್ಮಕ ಅವಕಾಶಗಳನ್ನು ಒದಗಿಸಿದರೆ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಅಲ್ಲದೆ, ರಾಜ್ಯದ ಸಾಂಪ್ರದಾಯಿಕ ಕ್ರೀಡೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದರು.
ಕ್ರೀಡಾ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಸರ್ಕಾರದಿಂದ ನೀಡಲಾಗುವ ವಿವಿಧ ಪ್ರಶಸ್ತಿಗಳ ಕುರಿತು ಸಭೆಯಲ್ಲಿ ಚರ್ಚಿಸಿದರು. ಸಾಧಕರಿಗೆ ನೀಡಬೇಕಿರುವ ಕ್ರೀಡಾ ಪ್ರಶಸ್ತಿಗಳನ್ನು ಯಾವುದೇ ಕಾರಣಕ್ಕೂ ಬಾಕಿ ಉಳಿಸಬಾರದು. ಅರ್ಹ ಕ್ರೀಡಾಪಟುಗಳನ್ನು ಪಾರದರ್ಶಕವಾಗಿ ಗುರುತಿಸಿ, ಪ್ರಶಸ್ತಿಗಳನ್ನು ನೀಡುವ ಮೂಲಕ ಅವರ ಸಾಧನೆಯನ್ನು ಗೌರವಿಸುವ ಕೆಲಸವಾಗಬೇಕು. ಇದು ಇತರ ಯುವ ಕ್ರೀಡಾಪಟುಗಳಿಗೂ ಪ್ರೇರಣೆಯಾಗಲಿದೆ ಎಂದು ಅವರು ಹೇಳಿದರು.
ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತ ಕುಮಾರ್, ಸರ್ಕಾರಿ ವೈಮಾನಿಕ ತರಬೇತಿ ಶಾಲೆಯ ನಿರ್ದೇಶಕ ಬಸವರಾಜೇಂದ್ರ ಹಾಗೂ ಮುಜರಾಯಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
PublicNext
09/06/2026 06:45 pm