ಮಂಗಳೂರು: ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಕುಲಶೇಖರದ ಸಿಲ್ವರ್ ಗೇಟ್ ನಿವಾಸಿ ಜನನ್ ಜಗನ್ನಾಥ್ (29), ಬೋಳಾರ ನಿವಾಸಿ ಪರೀಕ್ಷಿತ್(33) ಮತ್ತು ಕಾರ್‌ಸ್ಟ್ರೀಟ್ ನಿವಾಸಿ ಸುಶಾನ್ ಪೂಜಾರಿ (27) ಬಂಧಿತ ಆರೋಪಿಗಳು.
ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಎಂಡಿಎಂಎ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಸಿಸಿಬಿ ಪೊಲೀಸರು ಜೂ.6ರಂದು ನಗರದ ಹೊಯ್ಗೆಬಜಾರ್ ನಿವಾಸಿ ಪ್ರಣಾಮ್ ಕೋಟ್ಯಾನ್ (30) ಎಂಬಾತನನ್ನು ಬಂಧಿಸಿದ್ದರು. ವಿಚಾರಣೆ ವೇಳೆ ಪ್ರಣಾಮ್ ಕೋಟ್ಯಾನ್ ನೀಡಿದ ಮಾಹಿತಿಯಂತೆ ಸುಶಾನ್ ಪೂಜಾರಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಯನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸುವ ಸಲುವಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಾಗುವುದು ಎಂದು ಪ್ರಕಟನೆ ತಿಳಿಸಿದೆ.
ಜೂನ್ 8ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಗೂಡ್‌ಶೆಡ್ಡೆ ಪರಿಸರದಲ್ಲಿ ನಿಷೇಧಿತ ಮಾದಕದ್ರವ್ಯ ಎಂಡಿಎಂಎಯನ್ನು ಸಾರ್ವಜನಿಕರಿಗೆ ಮಾರಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿ ಮಾಹಿತಿ ಸಂಗ್ರಹಿಸಿ ದಾಳಿ ಮಾಡಿ ನಿಷೇಧಿತ ಮಾದಕದ್ರವ್ಯ ಎಂಡಿಎಂಎ ಹಾಗೂ ಇತರ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಈ ವೇಳೆ ಜನನ್ ಜಗನ್ನಾಥ್ ಮತ್ತು ಪರೀಕ್ಷಿತ್ ಎಂಬುವರನ್ನು ದಸ್ತಗಿರಿ ಮಾಡಲಾಗಿರುತ್ತದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಬಂಧಿತರಿಂದ 11.68ಗ್ರಾಂ ಎಂಡಿಎಂಎ, 1,110 ರೂ. ನಗದು, 3 ಮೊಬೈಲ್ ಫೋನ್‌ಗಳು, 1ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ.
PublicNext
09/06/2026 10:27 pm