ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

1,290 ವೈದ್ಯರ ನೇಮಕಾತಿ! ಗ್ರಾಮೀಣ ಸೇವೆಗೆ ₹15 ಸಾವಿರ ಹೆಚ್ಚುವರಿ ಸಂಬಳ - ಖಾದರ್ ಮಹತ್ವದ ಘೋಷಣೆ

ಬೆಂಗಳೂರು : ರಾಜ್ಯದ ಆರೋಗ್ಯ ಇಲಾಖೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಆರೋಗ್ಯ ಇಲಾಖೆ ಸಂಬಂಧಿಸಿದಂತೆ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಇಲಾಖೆಯ ಯೋಜನೆಗಳು, ಕಾರ್ಯಕ್ರಮಗಳ ಅನುಷ್ಠಾನ ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿಸ್ತೃತ ಚರ್ಚೆ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ.

ಆರೋಗ್ಯ ಇಲಾಖೆ ರಾಜ್ಯದ ಅತಿದೊಡ್ಡ ಮತ್ತು ಪ್ರಮುಖ ಇಲಾಖೆಯಾಗಿದ್ದು, ಗ್ರಾಮೀಣ ಭಾಗದಲ್ಲಿ ಸರ್ಕಾರಿ ಆಸ್ಪತ್ರೆಗಳು ಜನರಿಗೆ ಉತ್ತಮ ಸೇವೆ ನೀಡುತ್ತಿವೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಇನ್ನಷ್ಟು ಸಬಲಗೊಳಿಸುವ ಅಗತ್ಯವಿದೆ ಎಂದು ಸಚಿವರು ತಿಳಿಸಿದ್ದಾರೆ. ಪ್ರಸ್ತುತ ಇಲಾಖೆಯಲ್ಲಿ ಸುಮಾರು 1,290 ಎಂಬಿಬಿಎಸ್ ವೈದ್ಯರು, 900 ತಜ್ಞ ವೈದ್ಯರು ಹಾಗೂ 800 ನರ್ಸ್‌ಗಳ ಕೊರತೆ ಇದೆ. ಈ ಹಿನ್ನೆಲೆಯಲ್ಲಿ ವೈದ್ಯರ ನೇಮಕಾತಿಗೆ ಸರ್ಕಾರ ಮುಂದಾಗಿದೆ. ಎಂಬಿಬಿಎಸ್ ಪೂರ್ಣಗೊಳಿಸಿದ ಅಭ್ಯರ್ಥಿಗಳು ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿಗೆ ಅರ್ಜಿ ಸಲ್ಲಿಸಿದರೆ, ಅಗತ್ಯ ಮಾರ್ಗಸೂಚಿಗಳ ಆಧಾರದ ಮೇಲೆ ನೇಮಕಾತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಗಡಿ ಪ್ರದೇಶಗಳು, ಅರಣ್ಯ ಪ್ರದೇಶಗಳು ಮತ್ತು ಘಟ್ಟ ಪ್ರದೇಶಗಳಲ್ಲಿ ಸೇವೆ ಸಲ್ಲಿಸಲು ವೈದ್ಯರು ಮುಂದೆ ಬರುತ್ತಿಲ್ಲ. ಆದ್ದರಿಂದ ಇಂತಹ ಪ್ರದೇಶಗಳಲ್ಲಿ ಕೆಲಸ ಮಾಡಲು ಆಸಕ್ತಿ ತೋರುವವರಿಗೆ ಹೆಚ್ಚುವರಿ 15 ಸಾವಿರ ರೂಪಾಯಿ ಪ್ರೋತ್ಸಾಹಧನ ನೀಡುವ ಬಗ್ಗೆ ತೀರ್ಮಾನಿಸಲಾಗಿದೆ. 60 ವರ್ಷ ವಯಸ್ಸಿನಲ್ಲಿ ನಿವೃತ್ತಿಯಾಗುವ ವೈದ್ಯರನ್ನು ಒಪ್ಪಂದ ಆಧಾರದಲ್ಲಿ ಮತ್ತೆ ಸೇವೆಗೆ ಬಳಸಿಕೊಳ್ಳುವ ಯೋಜನೆಯೂ ಸರ್ಕಾರದ ಮುಂದಿದೆ.

ಇದಲ್ಲದೆ, 400 ನರ್ಸ್‌ಗಳು ಮತ್ತು 400 ಫಾರ್ಮಸಿಸ್ಟ್‌ಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುತ್ತಿದೆ. ಔಷಧಿಗಳ ಕೊರತೆ ನಿವಾರಣೆಗೆ 200ಕ್ಕೂ ಹೆಚ್ಚು ಔಷಧಿಗಳಿಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮುಂದಿನ ಮೂರು ತಿಂಗಳೊಳಗೆ ಅವುಗಳ ಸರಬರಾಜು ಆರಂಭವಾಗಲಿದೆ. ಎಬೋಲಾ ಸೋಂಕಿನ ಕುರಿತು ಆತಂಕ ಬೇಡ ಎಂದು ಸಚಿವರು ಸ್ಪಷ್ಟಪಡಿಸಿದ್ದು, ವಿದೇಶದಿಂದ ಬಂದ 88 ಮಂದಿಯ ಪರೀಕ್ಷಾ ವರದಿಗಳು ನೆಗೆಟಿವ್ ಬಂದಿವೆ ಎಂದು ತಿಳಿಸಿದ್ದಾರೆ.

Edited By : Somashekar
PublicNext

PublicNext

10/06/2026 06:00 pm

Cinque Terre

5.67 K

Cinque Terre

0

ಸಂಬಂಧಿತ ಸುದ್ದಿ