ಸಕಲೇಶಪುರ: ನಿರಂತರ ಕಾಡಾನೆಗಳ ಹಾವಳಿಯಿಂದ ಗ್ರಾಮೀಣ ಪ್ರದೇಶದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಬೆಳೆ ನಷ್ಟ ಹಾಗೂ ಜೀವಭಯದ ನಡುವೆ ಜೀವನ ನಡೆಸುವಂತಾಗಿದೆ ಎಂದು ಮಲೆನಾಡು ರಕ್ಷಣಾ ಸೇನೆ ಹಾಸನ ಜಿಲ್ಲಾ ಉಪಾಧ್ಯಕ್ಷ ನಾಗೇಂದ್ರ ಹೊಸಕೊಪ್ಪಲು ಆತಂಕ ವ್ಯಕ್ತಪಡಿಸಿದ್ದಾರೆ.
ಕಲ್ಲಳ್ಳಿ, ಕೆಸಗುಲಿ, ಬಾಳುಗೋಡು, ಹೊಸಕೋಪ್ಪಲು, ಕಿರುವಾಲೆ, ಉದೇವಾರ, ಹೆಬ್ಬನಹಳ್ಳಿ, ಹಲಸೂಲಿ, ಕಿರೆಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳ ಉಪಟಳ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರೈತರು ತಮ್ಮ ಕೃಷಿ ಚಟುವಟಿಕೆಗಳನ್ನು ನಡೆಸಲು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಾಡಾನೆಗಳು ರಾತ್ರಿ ವೇಳೆ ತೋಟಗಳು ಮತ್ತು ಕೃಷಿ ಜಮೀನುಗಳಿಗೆ ನುಗ್ಗಿ ಕಾಫಿ, ಅಡಿಕೆ, ಬಾಳೆ ಸೇರಿದಂತೆ ವಿವಿಧ ಬೆಳೆಗಳನ್ನು ನಾಶಪಡಿಸುತ್ತಿವೆ. ಇದರಿಂದ ರೈತರು ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸುತ್ತಿದ್ದು, ಜೀವನೋಪಾಯವೇ ಸಂಕಷ್ಟಕ್ಕೆ ಸಿಲುಕಿದೆ. ಹಲವು ಕುಟುಂಬಗಳು ಆತಂಕದ ವಾತಾವರಣದಲ್ಲಿ ದಿನ ಕಳೆಯುವಂತಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಈ ಕುರಿತು ಸಂಬಂಧಪಟ್ಟ ಅರಣ್ಯ ಇಲಾಖೆ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಬೇಕು. ಕಾಡಾನೆಗಳನ್ನು ಕಾಡಿನೊಳಗೆ ಓಡಿಸುವುದು, ಸೋಲಾರ್ ಬೇಲಿ ಅಳವಡಿಕೆ, ಆನೆ ತಡೆ ಕಂದಕಗಳ ನಿರ್ವಹಣೆ ಸೇರಿದಂತೆ ಶಾಶ್ವತ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಮಲೆನಾಡಿನ ರೈತರು ರಾಜ್ಯದ ಆರ್ಥಿಕತೆಗೆ ಮಹತ್ವದ ಕೊಡುಗೆ ನೀಡುತ್ತಿದ್ದು, ಅವರ ಸಮಸ್ಯೆಗಳಿಗೆ ಆದ್ಯತೆ ನೀಡುವುದು ಸರ್ಕಾರದ ಕರ್ತವ್ಯವಾಗಿದೆ. ರೈತರ ಜೀವ ಮತ್ತು ಆಸ್ತಿಯನ್ನು ರಕ್ಷಿಸುವ ನಿಟ್ಟಿನಲ್ಲಿ ತುರ್ತು ಕ್ರಮಗಳನ್ನು ಕೈಗೊಳ್ಳದಿದ್ದರೆ ರೈತ ಸಂಘಟನೆಗಳೊಂದಿಗೆ ಸೇರಿ ಹೋರಾಟ ರೂಪಿಸಲಾಗುವುದು ಎಂದು ನಾಗೇಂದ್ರ ಹೊಸಕೋಪ್ಪಲು ಎಚ್ಚರಿಕೆ ನೀಡಿದರು.
ಕಾಡಾನೆಗಳ ಹಾವಳಿಯಿಂದ ನಲುಗುತ್ತಿರುವ ರೈತರ ಸಂಕಷ್ಟಕ್ಕೆ ಸರ್ಕಾರ ಹಾಗೂ ಅರಣ್ಯ ಇಲಾಖೆ ಮಾನವೀಯ ದೃಷ್ಟಿಯಿಂದ ಸ್ಪಂದಿಸಿ ಶೀಘ್ರ ಪರಿಹಾರ ಕಲ್ಪಿಸಬೇಕೆಂದು ಅವರು ಮನವಿ ಮಾಡಿದ್ದಾರೆ
PublicNext
11/06/2026 12:04 pm