ಉಡುಪಿ : ಜಿಲ್ಲೆಯ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಸಚಿವೆ ಅವರು ಕಾಪುವಿನ ಕಾಪು ಹೊಸ ಮಾರಿಗುಡಿ ,ಉಡುಪಿಯ ಶ್ರೀಕೃಷ್ಣಮಠ ಹಾಗೂ ಉಚ್ಚಿಲದ ಮಹಾಲಕ್ಷ್ಮೀ ದೇವಸ್ಥಾನಗಳಿಗೆ ಭೇಟಿ ನೀಡಿ ಆಶೀರ್ವಾದ ಪಡೆದರು. ಈ ವೇಳೆ ವಿವಿಧ ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗಿಯಾಗಿ ದೇವಾಲಯಗಳ ಪರಂಪರೆ ಮತ್ತು ಧಾರ್ಮಿಕ ಆಚರಣೆಗಳ ಬಗ್ಗೆ ಮಾಹಿತಿ ಪಡೆದರು.
ದೇವಾಲಯ ಆಡಳಿತ ಮಂಡಳಿ ಸದಸ್ಯರು ಹಾಗೂ ಬಿಜೆಪಿ ಮುಖಂಡರು ಸಚಿವೆಯನ್ನು ಸ್ವಾಗತಿಸಿ ಗೌರವಿಸಿದರು. ದೇವಾಲಯಗಳ ಭೇಟಿ ಸಂದರ್ಭದಲ್ಲಿ ಸ್ಥಳೀಯರೊಂದಿಗೆ ಕೆಲಕಾಲ ಮಾತುಕತೆ ನಡೆಸಿದ ಸಚಿವೆ, ಜಿಲ್ಲೆಯ ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಉಡುಪಿ ಜಿಲ್ಲೆಯಲ್ಲಿ ನಡೆಯಲಿರುವ ಬಿಜೆಪಿ ಜಿಲ್ಲಾ ಪ್ರಶಿಕ್ಷಣ ವರ್ಗದಲ್ಲಿ ಭಾಗವಹಿಸುವ ಮುನ್ನ ನಿರ್ಮಲಾ ಸೀತಾರಾಮನ್ ಅವರು ದೇವರ ಆಶೀರ್ವಾದ ಪಡೆದಿದ್ದು, ಅವರ ಈ ಧಾರ್ಮಿಕ ಪ್ರವಾಸ ಸಾರ್ವಜನಿಕರ ಗಮನ ಸೆಳೆಯಿತು. ಕಾಪು, ಉಡುಪಿ ಹಾಗೂ ಉಚ್ಚಿಲ ಭಾಗಗಳಲ್ಲಿ ಸಚಿವೆಯ ಭೇಟಿ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿತ್ತು.
PublicNext
13/06/2026 10:24 am
LOADING...