ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿಕ್ಷಣದಲ್ಲಿ ಕ್ರಾಂತಿ: ಕಿಂಡರ್‌ಗಾರ್ಟನ್‌ನಿಂದ ಪಿಜಿವರೆಗೆ ಉಚಿತ ಶಿಕ್ಷಣ – ಒಡಿಶಾ ಸರ್ಕಾರ ಘೋಷಣೆ

ಭುವನೇಶ್ವರ: ಶಿಕ್ಷಣ ಕ್ಷೇತ್ರದಲ್ಲಿ ಐತಿಹಾಸಿಕ ಹೆಜ್ಜೆಯಿಟ್ಟಿರುವ ಒಡಿಶಾ ಸರ್ಕಾರ, ಕಿಂಡರ್‌ಗಾರ್ಟನ್‌ನಿಂದ ಸ್ನಾತಕೋತ್ತರ ಪದವಿವರೆಗೆ ಉಚಿತ ಶಿಕ್ಷಣ ನೀಡುವುದಾಗಿ ಘೋಷಿಸಿದೆ. ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದ್ದು, ರಾಜ್ಯದ 10 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಇದರ ನೇರ ಲಾಭ ದೊರೆಯಲಿದೆ.

ಈವರೆಗೆ 10ನೇ ತರಗತಿವರೆಗೆ ಮಾತ್ರ ಉಚಿತ ಶಿಕ್ಷಣ ನೀಡಲಾಗುತ್ತಿತ್ತು. ಇದೀಗ ಸರ್ಕಾರಿ ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳ ಪ್ರವೇಶ ಶುಲ್ಕವನ್ನೂ ಸಂಪೂರ್ಣ ರದ್ದುಪಡಿಸಲಾಗಿದ್ದು, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಬಾಗಿಲು ಇನ್ನಷ್ಟು ತೆರೆಯಲಿದೆ.

ದೇಶದಲ್ಲೇ ಕೆಜಿ ಟು ಪಿಜಿ ಉಚಿತ ಶಿಕ್ಷಣ ಜಾರಿಗೆ ತಂದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಒಡಿಶಾ ಪಾತ್ರವಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಈ ಯೋಜನೆಯಿಂದ ರಾಜ್ಯದ ಬೊಕ್ಕಸಕ್ಕೆ ವಾರ್ಷಿಕ ಸುಮಾರು 30 ಕೋಟಿ ರೂಪಾಯಿ ಹೆಚ್ಚುವರಿ ಹೊರೆ ಬೀಳಲಿದೆ ಎನ್ನಲಾಗಿದೆ.

ಇದರ ಜೊತೆಗೆ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು 45 ಸಾವಿರಕ್ಕೂ ಹೆಚ್ಚು ಶಿಕ್ಷಕರ ನೇಮಕಾತಿ ನಡೆಸಲಾಗುವುದು. ಈಗಾಗಲೇ ಕಳೆದ ಎರಡು ವರ್ಷಗಳಲ್ಲಿ 26 ಸಾವಿರ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ನಾಲ್ಕು ಹೊಸ ವಿಶ್ವವಿದ್ಯಾಲಯಗಳ ಸ್ಥಾಪನೆಗೂ ಸರ್ಕಾರ ಮುಂದಾಗಿದ್ದು, ಶಿಕ್ಷಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ.

ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಈ ಯೋಜನೆ ದೇಶದ ಶಿಕ್ಷಣ ವ್ಯವಸ್ಥೆಗೆ ಹೊಸ ಮಾದರಿಯಾಗುವ ನಿರೀಕ್ಷೆ ಮೂಡಿಸಿದೆ.

Edited By :
PublicNext

PublicNext

13/06/2026 04:02 pm

Cinque Terre

14.69 K

Cinque Terre

2