ಮೂಡುಬಿದಿರೆ: ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ (CRIF) ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಒಟ್ಟು ₹57 ಕೋಟಿ ಅನುದಾನ ಮಂಜೂರಾಗಿದ್ದು, ಇದರಲ್ಲಿ ಮೂಡುಬಿದಿರೆ ಭಾಗದ ಎರಡು ಪ್ರಮುಖ ರಸ್ತೆ ಕಾಮಗಾರಿಗಳಿಗೆ ₹11 ಕೋಟಿ ಮೀಸಲಿಡಲಾಗಿದೆ ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಮೂಡುಬಿದಿರೆಯ ಹೊಸಂಗಡಿ-ಪುಚ್ಚಮೊಗರು ಸೇತುವೆಯಿಂದ ಬೆಳ್ತಂಗಡಿ-ಬಂಟ್ವಾಳ ಕ್ರಾಸ್‌ವರೆಗೆ 8.90 ಕಿ.ಮೀ ಉದ್ದದ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ₹6 ಕೋಟಿ ಮಂಜೂರಾಗಿದ್ದು, ಈ ಮಾರ್ಗದ ಸಂಚಾರ ವ್ಯವಸ್ಥೆ ಮತ್ತಷ್ಟು ಸುಧಾರಣೆಯಾಗಲಿದೆ. ಅಲ್ಲದೆ ಎಕ್ಸಲೆಂಟ್ ಕಾಲೇಜಿನಿಂದ ಮೂಡುಬಿದಿರೆ ಪೊಲೀಸ್ ಠಾಣೆ ರಸ್ತೆಯವರೆಗಿನ ಬೆಳ್ತಂಗಡಿ-ಮೂಡುಬಿದಿರೆ-ಮುಲ್ಕಿ ರಾಜ್ಯ ಹೆದ್ದಾರಿಯ 5 ಕಿ.ಮೀ ರಸ್ತೆ ನವೀಕರಣ ಕಾಮಗಾರಿಗೆ ₹5 ಕೋಟಿ ಅನುದಾನ ನೀಡಲಾಗಿದೆ.
ಒಟ್ಟಾರೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ 82.94 ಕಿ.ಮೀ ಉದ್ದದ ರಸ್ತೆ ಅಭಿವೃದ್ಧಿ ಮತ್ತು ನವೀಕರಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, ಗ್ರಾಮೀಣ ಹಾಗೂ ನಗರ ಪ್ರದೇಶಗಳ ಸಂಪರ್ಕ ವ್ಯವಸ್ಥೆ ಬಲಪಡಿಸುವ ಉದ್ದೇಶ ಹೊಂದಿದೆ. ಈ ಯೋಜನೆ ಜಿಲ್ಲೆಯ ಆರ್ಥಿಕ, ಶೈಕ್ಷಣಿಕ ಹಾಗೂ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಉತ್ತೇಜನ ನೀಡಲಿದ್ದು, ಅನುದಾನ ಮಂಜೂರು ಮಾಡಿದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಕೃತಜ್ಞತೆ ಸಲ್ಲಿಸಿದ್ದಾರೆ.
Kshetra Samachara
13/06/2026 09:11 pm
LOADING...