ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಬಲವಂತದ ಭೂಸ್ವಾಧೀನ ನಿಲ್ಲಿಸಿ! ರಾಹುಲ್‌ಗೆ ವಿಜಯೇಂದ್ರ ಬಹಿರಂಗ ಪತ್ರ

ಬೆಂಗಳೂರು: ಬಿಡದಿ ಪ್ರದೇಶದಲ್ಲಿ ರೈತರ ಫಲವತ್ತಾದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ ತೀವ್ರ ವಿವಾದಕ್ಕೆ ಕಾರಣವಾಗಿದ್ದು, ಈ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ.

ಬಿಡದಿ ಮತ್ತು ಹಾರೋಹಳ್ಳಿ ನಡುವಿನ ಸುಮಾರು 7,481 ಎಕರೆ ಭೂಮಿಯಲ್ಲಿ 18 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ (GBIT) ನಿರ್ಮಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಆದರೆ ಈ ಯೋಜನೆಗಾಗಿ ಫಲವತ್ತಾದ ಕೃಷಿಭೂಮಿಯನ್ನೇ ಆಯ್ಕೆ ಮಾಡಿರುವುದು ರೈತರ ಬದುಕಿಗೆ ದೊಡ್ಡ ಹೊಡೆತವಾಗಿದೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ.

ಕಳೆದ 470 ದಿನಗಳಿಂದ 25 ಹಳ್ಳಿಗಳ ರೈತರು ಶಾಂತಿಯುತ ಹೋರಾಟ ನಡೆಸುತ್ತಿದ್ದರೂ, 3,500ಕ್ಕೂ ಹೆಚ್ಚು ರೈತರು ಲಿಖಿತ ಆಕ್ಷೇಪಣೆ ಸಲ್ಲಿಸಿದ್ದರೂ ಸರ್ಕಾರ ಅವರ ಧ್ವನಿಯನ್ನು ನಿರ್ಲಕ್ಷಿಸಿದೆ ಎಂದು ಅವರು ಕಿಡಿಕಾರಿದ್ದಾರೆ. ಬೆಂಗಳೂರು ನಗರಕ್ಕೆ ಹಾಲು, ಹಣ್ಣು, ತರಕಾರಿ ಪೂರೈಸುವ ಕೃಷಿಭೂಮಿಯನ್ನು ಕಾಂಕ್ರೀಟ್ ಕಾಡಾಗಿ ಪರಿವರ್ತಿಸಲು ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದ್ದಾರೆ.

ಈ ಯೋಜನೆಯಿಂದ ಸಾವಿರಾರು ಗ್ರಾಮೀಣ ಮಹಿಳೆಯರು ಉದ್ಯೋಗ ಕಳೆದುಕೊಳ್ಳಲಿದ್ದು, ಬೈರಮಂಗಲ ಕೆರೆಯ ಪರಿಸರ ವ್ಯವಸ್ಥೆಯೂ ಅಪಾಯಕ್ಕೆ ಸಿಲುಕಲಿದೆ ಎಂದು ಎಚ್ಚರಿಸಿದ್ದಾರೆ. ರೈತರ ಪರವಾಗಿ ತಕ್ಷಣ ಮಧ್ಯಪ್ರವೇಶಿಸಿ ಭೂಸ್ವಾಧೀನ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ರಾಹುಲ್ ಗಾಂಧಿಗೆ ವಿಜಯೇಂದ್ರ ಮನವಿ ಮಾಡಿದ್ದಾರೆ.

Edited By :
PublicNext

PublicNext

14/06/2026 04:29 pm

Cinque Terre

13.99 K

Cinque Terre

2