ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜೈಪುರದಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ ಸಂಸ್ಥಾಪಕ ಅಭಿಜೀತ್ ದಿಪ್ಕೆಗೆ ಸಾರ್ವಜನಿಕವಾಗಿ ಕಪಾಳಮೋಕ್ಷ!

ಜೈಪುರ: ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಡೆದ ಬೃಹತ್ ಯುವ ಪ್ರತಿಭಟನೆ ವೇಳೆ, ದೇಶಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಸಾರ್ವಜನಿಕವಾಗಿ ಕಪಾಳಮೋಕ್ಷ ಮಾಡಿದ್ದಾನೆ. ಈ ಘಟನೆ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.

ಜೈಪುರದ ಶಹೀದ್ ಸ್ಮಾರಕದ ಬಳಿ ಈ ಆಘಾತಕಾರಿ ಘಟನೆ ನಡೆದಿದೆ. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಅಭಿಜೀತ್ ದಿಪ್ಕೆ ಅವರನ್ನು ಬೆಂಬಲಿಗರು ಹೆಗಲ ಮೇಲೆ ಹೊತ್ತುಕೊಂಡು ಸಾಗುತ್ತಿದ್ದಾಗ, ಜನಸಂದಣಿಯ ನಡುವಿನಿಂದ ದಿಢೀರನೆ ನುಗ್ಗಿದ ಅಪರಿಚಿತ ವ್ಯಕ್ತಿಯೊಬ್ಬ ಅವರ ಸ್ಕಾರ್ಫ್ ಎಳೆದು ಕೆಳಕ್ಕೆ ತಳ್ಳಿ, ಸರಣಿಯಾಗಿ ಕಪಾಳಮೋಕ್ಷ ಮಾಡಿದ್ದಾನೆ. ಈ ಅನಿರೀಕ್ಷಿತ ಹಲ್ಲೆಯಿಂದಾಗಿ ಪ್ರತಿಭಟನಾ ಸ್ಥಳದಲ್ಲಿ ಕೆಲಕಾಲ ತೀವ್ರ ಗೊಂದಲ ಮತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

NEET ಪರೀಕ್ಷೆಯ ಪೇಪರ್ ಲೀಕ್, ಪರೀಕ್ಷಾ ಅಕ್ರಮಗಳು ಹಾಗೂ ದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆಯನ್ನು ಖಂಡಿಸಿ ಈ ಬೃಹತ್ ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಎಂಬ ವ್ಯಂಗ್ಯಭರಿತ ರಾಜಕೀಯ ಆಂದೋಲನವನ್ನು ದಿಪ್ಕೆ ಮುನ್ನಡೆಸುತ್ತಿದ್ದಾರೆ. ಇದೇ ಪ್ರತಿಭಟನೆಯ ಸಂದರ್ಭದಲ್ಲಿ ಈ ಹಲ್ಲೆ ನಡೆದಿದೆ.

ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತಕ್ಷಣ ಕ್ರಮ ಕೈಗೊಂಡು ಇಬ್ಬರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ದಿಪ್ಕೆ ಮೇಲಿನ ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರವಾಗಿ ವೈರಲ್ ಆಗಿದ್ದು, ಅಂತರ್ಜಾಲದಲ್ಲಿ ವ್ಯಾಪಕ ಆಕ್ರೋಶ ಹಾಗೂ ಪರ-ವಿರೋಧದ ಚರ್ಚೆಗಳಿಗೆ ಕಾರಣವಾಗಿದೆ. ಪೇಪರ್ ಲೀಕ್ ಹಗರಣದ ವಿರುದ್ಧ ದೇಶಾದ್ಯಂತ ಯುವಕರ ಪ್ರತಿಭಟನೆಗಳು ಮುಂದುವರಿದಿರುವಾಗಲೇ ಈ ಘಟನೆ ಮತ್ತಷ್ಟು ಆಕ್ರೋಶಕ್ಕೆ ತುಪ್ಪ ಸುರಿದಿದೆ.

Edited By : Vijay Kumar
PublicNext

PublicNext

15/06/2026 10:15 pm

Cinque Terre

8.85 K

Cinque Terre

3

ಸಂಬಂಧಿತ ಸುದ್ದಿ