ದಾವಣಗೆರೆ: ಭ್ರಷ್ಟಾಚಾರ ನಿರ್ಮೂಲನೆಗೆ ಮುಂದಾಗಿರುವ ಲೋಕಾಯುಕ್ತ ಅಧಿಕಾರಿಗಳು ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಬೇಟೆಗೆ ಇಳಿದಿದ್ದಾರೆ. ದಾವಣಗೆರೆ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೆಳ್ಳಂಬೆಳಗ್ಗೆ ಏಕಕಾಲಕ್ಕೆ ದಾಳಿ ನಡೆಸಿ ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ. ಈ ಕಾರ್ಯಾಚರಣೆಯ ಭಾಗವಾಗಿ ದಾವಣಗೆರೆಯಲ್ಲಿ ಲಕ್ಷಾಂತರ ರೂಪಾಯಿ ನಗದು ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.
ದಾವಣಗೆರೆಯಲ್ಲಿ 40 ಲಕ್ಷ ನಗದು ವಶ
ದಾವಣಗೆರೆಯಲ್ಲಿ ಲೋಕಾಯುಕ್ತ ಎಸ್ಪಿ ಎಂ.ಎಸ್. ಕೌಲಾಪುರೆ ನೇತೃತ್ವದಲ್ಲಿ ಒಟ್ಟು 12 ತಂಡಗಳು ದಾಳಿ ನಡೆಸಿವೆ. ಈ ದಾಳಿಯ ಸಂದರ್ಭದಲ್ಲಿ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (NWKRTC) ಹುಬ್ಬಳ್ಳಿ ವಿಭಾಗದ ಮುಖ್ಯ ಮೆಕ್ಯಾನಿಕ್ ಸಿದ್ದೇಶ್ವರ ಹೆಬ್ಬಾಳ್ ಅವರ ದಾವಣಗೆರೆಯಲ್ಲಿರುವ ಮನೆಯಲ್ಲಿ ಭಾರಿ ಪ್ರಮಾಣದ ಅಕ್ರಮ ಸಂಪತ್ತು ಪತ್ತೆಯಾಗಿದೆ. ದಾಳಿ ವೇಳೆ ಸಿದ್ದೇಶ್ವರ ಹೆಬ್ಬಾಳ್ ಮನೆಯಲ್ಲಿ ಸುಮಾರು 40 ಲಕ್ಷ ರೂಪಾಯಿ ನಗದು ಹಾಗೂ ಅಪಾರ ಪ್ರಮಾಣದ ಚಿನ್ನಾಭರಣಗಳು ಪತ್ತೆಯಾಗಿವೆ.
ದಾವಣಗೆರೆಯಲ್ಲಿ ಒಟ್ಟು ಮೂರು ಅಧಿಕಾರಿಗಳ ನಿವಾಸಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಸಿದ್ದೇಶ್ವರ ಹೆಬ್ಬಾಳ್ ಅವರಲ್ಲದೆ, ಬಯಲು ಸೀಮೆ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಕೃಷ್ಣಾ ನಾಯ್ಕ್ ಮತ್ತು ಆರ್‌ಐಡಿಎಲ್ ಅಧೀಕ್ಷಕ ಇಂಜಿನಿಯರ್ ಸಣ್ಣ ಕೆಂಚಪ್ಪ ಅವರ ಮನೆಗಳ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ದಾವಣಗೆರೆ ಮಾತ್ರವಲ್ಲದೆ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭ್ರಷ್ಟಾಚಾರ ನಿಗ್ರಹಕ್ಕೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ಕಾರ್ಯಾಚರಣೆ ನಡೆಸಿದ್ದಾರೆ. ಈ ದಾಳಿಗಳು ಭ್ರಷ್ಟ ಅಧಿಕಾರಿಗಳ ನಿದ್ದೆಗೆಡಿಸಿದ್ದು, ಮತ್ತಷ್ಟು ಅಕ್ರಮ ಸಂಪತ್ತು ಪತ್ತೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
PublicNext
16/06/2026 11:02 am