ಶಿರಸಿ: ವಿದ್ಯುತ್ ಖಾಸಗೀಕರಣ ನೀತಿಯನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ನಗರದ ಸಹಾಯಕ ಆಯುಕ್ತರ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಟಾಟಾ ಪವರ್ ಕಂಪನಿಗೆ ವಿದ್ಯುತ್ ವಿತರಣೆ ಪರವಾನಿಗೆ ನೀಡುವ ಸರ್ಕಾರದ ನಿರ್ಧಾರವನ್ನು ಕೈಬಿಡುವಂತೆ ಆಗ್ರಹಿಸಿ, ಎಸಿ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಕಾರ್ಯದರ್ಶಿ ರಾಘವೇಂದ್ರ ಕಿರವತ್ತಿ ಮಾತನಾಡಿ, ಟಾಟಾ ಪವರ್ ಕಂಪನಿಯು ರಾಜ್ಯದಲ್ಲಿ ಸಮಾನಾಂತರ ವಿದ್ಯುತ್ ವಿತರಣಾ ಪರವಾನಿಗೆ ಪಡೆಯಲು ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗಕ್ಕೆ ಅರ್ಜಿ ಸಲ್ಲಿಸಿರುವ ವಿಷಯ ತಿಳಿದುಬಂದಿದೆ. ಈ ಮೂಲಕ ಸರ್ಕಾರವು ವಿದ್ಯುತ್ ಖಾಸಗೀಕರಣಕ್ಕೆ ಪರೋಕ್ಷವಾಗಿ ಕೈಜೋಡಿಸಿದಂತೆ ಕಾಣುತ್ತಿದೆ. ಒಂದು ವೇಳೆ ಸರ್ಕಾರವು ಟಾಟಾ ಪವರ್ ಕಂಪನಿಗೆ ಸರ್ಕಾರಿ ಸೌಮ್ಯದ ವಿದ್ಯುತ್ ಕಂಪನಿಗಳನ್ನು ವರ್ಗಾಯಿಸಲು ಮುಂದಾದರೆ, ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಲು ಸಿದ್ಧರಿದ್ದೇವೆ ಎಂದು ಎಚ್ಚರಿಕೆ ನೀಡಿದರು. ತಕ್ಷಣವೇ ಈ ನಿರ್ಧಾರವನ್ನು ಕೈಬಿಡಬೇಕು ಮತ್ತು ಇದಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಕನ್ನಡದಲ್ಲಿ ನೀಡಬೇಕು ಎಂದು ಅವರು ಆಗ್ರಹಿಸಿದರು.
ನಂತರ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ನಾಯ್ಕ, ಒಂದು ವೇಳೆ ಟಾಟಾ ಪವರ್ ಕಂಪನಿಗೆ ಸಮಾನಾಂತರ ವಿದ್ಯುತ್ ವಿತರಣಾ ಪರವಾನಿಗೆ ನೀಡಿದಲ್ಲಿ, ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಲ್ಲದೆ, ಹಳ್ಳಿ ಹಳ್ಳಿಗಳಲ್ಲಿ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳನ್ನು ತಡೆದು ಬೃಹತ್ ರೈತ ಚಳುವಳಿಯನ್ನು ಆಯೋಜಿಸಲಾಗುವುದು ಎಂದು ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು, ರೈತ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
Kshetra Samachara
17/06/2026 05:05 pm
LOADING...