ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭಟ್ಕಳ: ಕಾರಿನಲ್ಲಿ ಯುವತಿ ಕರೆದೊಯ್ದ ಪ್ರಕರಣ, ಹಿಂದೂ ಕಾರ್ಯಕರ್ತರ ವಿರುದ್ಧ ಕೇಸ್ ಖಂಡಿಸಿ ಪ್ರತಿಭಟನೆ

ಭಟ್ಕಳ: ಹಿಂದೂ ಯುವತಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ವೇಳೆ ತಡೆದು ಪೊಲೀಸರಿಗೆ ಒಪ್ಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಬಿಜೆಪಿ ಹಾಗೂ ವಿವಿಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಭಟ್ಕಳ ನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಕಾರ್ಯಕರ್ತರ ವಿರುದ್ಧದ ಪ್ರಕರಣವನ್ನು ತಕ್ಷಣ ಹಿಂಪಡೆಯಬೇಕು ಹಾಗೂ ಯುವತಿಯ ದೂರಿನಲ್ಲಿ ಉಲ್ಲೇಖವಾಗಿರುವ ಆರೋಪಿಯನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಪಶ್ಚಿಮ ಘಟ್ಟಗಳ ಕಾರ್ಯಪಡೆಯ ಮಾಜಿ ಅಧ್ಯಕ್ಷ ಗೋವಿಂದ ನಾಯ್ಕ, ಯುವತಿಯ ರಕ್ಷಣೆಗೆ ಮುಂದಾದ ಕಾರ್ಯಕರ್ತರ ವಿರುದ್ಧವೇ ಪ್ರಕರಣ ದಾಖಲಿಸಿರುವುದು ನ್ಯಾಯಸಮ್ಮತವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಘಟನೆಯ ಸ್ಥಳದಲ್ಲೇ ಪೊಲೀಸರು ಹಾಜರಿದ್ದರೂ ಆರೋಪಿಯ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಲಿಲ್ಲ. ಆದರೆ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸುವಲ್ಲಿ ಮಾತ್ರ ತುರ್ತು ತೋರಿದ್ದಾರೆ ಎಂದು ಆರೋಪಿಸಿದರು.

ಘಟನೆಯ ಸಂಪೂರ್ಣ ಸತ್ಯಾಂಶವನ್ನು ಬಹಿರಂಗಪಡಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಯುವತಿ ಮತ್ತು ಯುವಕನನ್ನು ತಡೆದು ಪೊಲೀಸರಿಗೆ ಒಪ್ಪಿಸಿದವರ ವಿರುದ್ಧ ಹಲ್ಲೆ ಹಾಗೂ ಜೀವ ಬೆದರಿಕೆ ಆರೋಪದಡಿ ಪ್ರಕರಣ ದಾಖಲಿಸಿರುವುದು ಅನ್ಯಾಯವಾಗಿದೆ ಎಂದು ಅವರು ಹೇಳಿದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಗದ್ದೆ 2ನೇ ಕ್ರಾಸ್ ನಿವಾಸಿ ಶಾಹೀದ್ ಖಾನ್ ನೀಡಿದ ದೂರಿನ ಮೇರೆಗೆ ಕುಮಾರ ನಾಯ್ಕ, ಶ್ರೀಕಾಂತ ನಾಯ್ಕ ಹಾಗೂ ಇನ್ನಿಬ್ಬರ ವಿರುದ್ಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಹಲ್ಲೆ ಮತ್ತು ಜೀವ ಬೆದರಿಕೆ ಆರೋಪದಡಿ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ಪರಿಚಯದ ಯುವತಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ವೇಳೆ ಕೆಲವರು ವಾಹನವನ್ನು ಅಡ್ಡಗಟ್ಟಿ ಹಲ್ಲೆ ನಡೆಸಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನೊಂದೆಡೆ, ನಿರ್ವಾಲ್ ಮಾರುಕೇರಿ ನಿವಾಸಿ ಯುವತಿಯೊಬ್ಬಳು ನೀಡಿದ ದೂರಿನ ಮೇರೆಗೆ ಶಾಹೀದ್ ಖಾನ್ ವಿರುದ್ಧವೂ ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಯುವತಿಯ ದೂರಿನ ಪ್ರಕಾರ, ಮಾತನಾಡಬೇಕಿದೆ ಎಂದು ಕರೆಸಿ ಬಲವಂತವಾಗಿ ಕಾರಿನಲ್ಲಿ ಕೂರಿಸಿಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಲು ಯತ್ನಿಸಲಾಗಿದೆ ಎಂದು ಆರೋಪಿಸಲಾಗಿದೆ.

ಪ್ರತಿಭಟನೆಯಲ್ಲಿ ಮಾತನಾಡಿದ ವಿವಿಧ ಸಂಘಟನೆಗಳ ಮುಖಂಡರು, ಯುವತಿಯ ದೂರಿನಲ್ಲಿ ಹೆಸರಿಸಲಾದ ಆರೋಪಿಯನ್ನು ತಕ್ಷಣ ಬಂಧಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ಆರೋಪಿಯ ಹಿನ್ನೆಲೆ ಹಾಗೂ ಈ ಹಿಂದೆ ಇಂತಹ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆಯೇ ಎಂಬುದರ ಕುರಿತು ತನಿಖೆ ನಡೆಸುವಂತೆ ಆಗ್ರಹಿಸಿದರು. ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ತಕ್ಷಣ ಹಿಂಪಡೆಯಬೇಕು. ಇಲ್ಲವಾದಲ್ಲಿ ಹೋರಾಟವನ್ನು ತೀವ್ರಗೊಳಿಸಿ ‘ಭಟ್ಕಳ ಚಲೋ’ ಹಾಗೂ ‘ಭಟ್ಕಳ ಬಂದ್’ಗೆ ಕರೆ ನೀಡಲಾಗುವುದು ಎಂದು ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಮುಖಂಡರು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಮಾಜಿ ಸಚಿವ ಶಿವಾನಂದ ನಾಯ್ಕ,ಈಶ್ವರ ಎನ್. ನಾಯ್ಕ,ಸುಬ್ರಾಯ ದೇವಾಡಿಗ, ಕೃಷ್ಣ ನಾಯ್ಕ ಆಸರಕೇರಿ, ಹಿಂದೂ ಜಾಗರಣ ವೇದಿಕೆಯ ಸಂಚಾಲಕ ಜಯಂತ ನಾಯ್ಕ, ರಾಮಕೃಷ್ಣ ನಾಯ್ಕ, ಬಿಜೆಪಿ ಮುಖಂಡ ಶ್ರೀಕಾಂತ ನಾಯ್ಕ, ಶ್ರೀನಿವಾಸ ನಾಯ್ಕ ಹನುಮಾನನಗರ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಪ್ರತಿಭಟನೆಯ ವೇಳೆ ಸ್ಥಳಕ್ಕೆ ಭೇಟಿ ನೀಡಿದ ಡಿವೈಎಸ್ಪಿ ಗಿರೀಶ್, ಪ್ರಕರಣವನ್ನು ಕಾನೂನುಬದ್ಧವಾಗಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಜಿಲ್ಲಾ ಹೆಚ್ಚುವರಿ ಎಸ್ಪಿ ಕೃಷ್ಣಮೂರ್ತಿ ಅವರು ಸಹ ಭಟ್ಕಳಕ್ಕೆ ಆಗಮಿಸಿ ಘಟನೆಯ ಕುರಿತು ಮಾಹಿತಿ ಪಡೆದರು. ಒಂದೇ ಘಟನೆಯ ಸಂಬಂಧ ಎರಡೂ ಕಡೆಯಿಂದ ದೂರುಗಳು ದಾಖಲಾಗಿರುವ ಹಿನ್ನೆಲೆಯಲ್ಲಿ ಭಟ್ಕಳ ಗ್ರಾಮೀಣ ಪೊಲೀಸರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ತನಿಖೆ ಪೂರ್ಣಗೊಂಡ ಬಳಿಕವೇ ಘಟನೆಯ ನೈಜ ಸತ್ಯಾಂಶ ಹೊರಬರಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Edited By : Somashekar
PublicNext

PublicNext

18/06/2026 01:15 pm

Cinque Terre

11.21 K

Cinque Terre

1

ಸಂಬಂಧಿತ ಸುದ್ದಿ