ಚಿಕ್ಕಮಗಳೂರು: ಕೆಎಸ್‌ಆರ್‌ಟಿಸಿ ಬಸ್ ಮತ್ತು ಥಾರ್ ಜೀಪ್ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿರುವ ಘಟನೆ ಚಿಕ್ಕಮಗಳೂರು- ಮೂಡಿಗೆರೆ ರಾಷ್ಟ್ರೀಯ ಹೆದ್ದಾರಿಯ ಶಿರವಳಲು ಗ್ರಾಮದ ಬಳಿ ನಡೆದಿದೆ. ತಿರುವಿನ ರಸ್ತೆಯಲ್ಲಿ ಬೇರೆ ವಾಹನವನ್ನು ಓವರ್‌ಟೇಕ್ ಮಾಡಲು ಹೋದ ಬಸ್ ಚಾಲಕನ ನಿರ್ಲಕ್ಷ್ಯವೇ ಈ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ. ಡಿಕ್ಕಿಯ ರಭಸಕ್ಕೆ ಕೇರಳ ಮೂಲದ ನಾಲ್ವರು ಸಂಗೀತಗಾರರು (ಮ್ಯೂಜಿಷಿಯನ್ಸ್) ಪ್ರಯಾಣಿಸುತ್ತಿದ್ದ ಥಾರ್ ಜೀಪ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿ ರಸ್ತೆ ಬದಿಗೆ ಉರುಳಿ ಬಿದ್ದಿದೆ. ಜೀಪ್‌ನಲ್ಲಿದ್ದ ನಾಲ್ಕೂ ಜನ ಸಂಗೀತಗಾರರು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.
ಅಪಘಾತದ ತೀವ್ರತೆಗೆ ಬಸ್‌ನಲ್ಲಿದ್ದ ಕೆಲ ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಬಸ್ ಚಾಲಕನ ಇಂತಹ ಬೇಜವಾಬ್ದಾರಿತನದ ಚಾಲನೆಗೆ ಸ್ಥಳೀಯ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ನಿಯಮ ಉಲ್ಲಂಘಿಸಿದ ಕೆಎಸ್‌ಆರ್‌ಟಿಸಿ ಚಾಲಕನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
PublicNext
18/06/2026 09:29 pm
LOADING...