ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಜೂನ್‌ 27ಕ್ಕೆ ಕೆಂಪೇಗೌಡ ಥೀಮ್ ಪಾರ್ಕ್ ಲೋಕಾರ್ಪಣೆ - ಸಚಿವ ಕೆ.ಹೆಚ್ ಮುನಿಯಪ್ಪ

ಬೆಂಗಳೂರು: ಜೂನ್ 27ಕ್ಕೆ ನಾಡಪ್ರಭು ಕೆಂಪೇಗೌಡರ ಜಯಂತಿ ದಿನದಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಾಣಗೊಂಡಿರುವ ಕೆಂಪೇಗೌಡ ಥೀಮ್ ಪಾರ್ಕ್ ಅನ್ನು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಕೆ.ಹೆಚ್ ಮುನಿಯಪ್ಪ ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೆಂಪೇಗೌಡ ಜಯಂತಿ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 108 ಅಡಿ ಎತ್ತರದ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಭವ್ಯ ಕಂಚಿನ ಪ್ರತಿಮೆ ಬಳಿ ಅಂದಾಜು 20 ಕೋಟಿ ರೂ.ಗಳ ವೆಚ್ಚದಲ್ಲಿ ಕೆಂಪೇಗೌಡ ಥೀಮ್ ಪಾರ್ಕ್ ನಿರ್ಮಿಸಲಾಗಿದ್ದು ಜೂನ್ 27 ರಂದು ಮುಖ್ಯಮಂತ್ರಿಗಳು ಬೆಳಿಗ್ಗೆ 8.30 ಕ್ಕೆ ಲೋಕಾರ್ಪಣೆ ಮಾಡಲಿದ್ದಾರೆ ಎಂದರು.

ರಾಜ್ಯ ಮಟ್ಟದ ಕಾರ್ಯಕ್ರಮವು ಬೆಂಗಳೂರು ನಗರದ ಕೆಂಗೇರಿಯ ಕೆಂಪೇಗೌಡ ಬಡಾವಣೆಯಲ್ಲಿ ಆಚರಿಸಲು ತೀರ್ಮಾನಿಸಲಾಗಿದೆ. ಕೆಂಪೇಗೌಡರ ವಂಶಸ್ಥರು ನೆಲೆಸಿದ್ದಂತ ದೇವನಹಳ್ಳಿ ತಾಲ್ಲೂಕಿನ ಆವತಿ ಗ್ರಾಮದಿಂದ ಪ್ರತಿ ವರ್ಷದಂತೆ ಈ ವರ್ಷವೂ ಜ್ಯೋತಿ ಹೊರಡಲಿದೆ ಎಂದು ಹೇಳಿದರು.

ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಕನಿಷ್ಠ 5000 ಜನ ಹೊರಡಬೇಕಿದೆ. ಆವತಿಯಿಂದ ಜ್ಯೋತಿ, ಜೊತೆಗೆ ಏರ್‌ಪೋರ್ಟ್‌ನಲ್ಲಿ ಸಿಎಂ ಕಾರ್ಯಕ್ರಮ, ರಾಜ್ಯ ಮಟ್ಟದ ಕಾರ್ಯಕ್ರಮ ಒಂದೇ ದಿನ ಇರುವುದರಿಂದ ಏಕಕಾಲದಲ್ಲಿ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಜನರು ಭಾಗಿಯಾಗಲು ಸಾಧ್ಯವಾಗುವುದಿಲ್ಲ. ಹಾಗಾಗಿ ಜಿಲ್ಲಾ ಮಟ್ಟದ ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲು ಬೇರೊಂದು ದಿನ ಆಯೋಜಿಸಲು ತೀರ್ಮಾನಿಸಲಾಗಿದ್ದು ಸಮುದಾಯದ ಮುಖಂಡರ ಜೊತೆ ಚರ್ಚಿಸಿ ದಿನಾಂಕ ನಿಗದಿ ಪಡಿಸಲಾಗುವುದು ಎಂದು ಸಚಿವರು ತಿಳಿಸಿದರು.

ಜೂನ್ 27 ರಂದು ಜಿಲ್ಲೆಯಲ್ಲಿ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ನಾಡಪ್ರಭು ಕೆಂಪೇಗೌಡರ ಪುತ್ಥಳಿಗೆ ಬೆಳಗ್ಗೆ 7.30 ಕ್ಕೆ ಮಾಲಾರ್ಪಣೆ ಮಾಡಲಾಗುವುದು, ನಂತರ ಬೆಳಗ್ಗೆ 08 ಗಂಟೆಗೆ ಆವತಿಯಲ್ಲಿ ಜ್ಯೋತಿ ಹೊರಡಲು ಚಾಲನೆ ನೀಡಲಾಗುವುದು. ಬೆಳಗ್ಗೆ 8.30 ಕ್ಕೆ ಏರ್‌ಪೋರ್ಟ್‌ನಲ್ಲಿ ಕೆಂಪೇಗೌಡ ಥೀಮ್ ಪಾರ್ಕ್ ಲೋಕಾರ್ಪಣೆ ಕಾರ್ಯಕ್ರಮ ಜರುಗಲಿದ್ದು ಅಲ್ಲಿಂದ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಹೊರಡಲಿದ್ದೇವೆ ಎಂದರು.

ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಹೊರಡಲು ಜಿಲ್ಲೆಯ ನಾನಾ ಭಾಗಗಳಿಂದ ಬೆಳಗ್ಗೆ 07 ಗಂಟೆಗೆ ಬಸ್ ವ್ಯವಸ್ಥೆ ಮಾಡಲಾಗುವುದು, ಜೊತೆಗೆ ಉಪಹಾರ ಇರಲಿದೆ. ಜಿಲ್ಲೆಯ ಎಲ್ಲಾ ಸಂಘಟನೆಗಳ ಮುಖಂಡರು, ಸಮುದಾಯ ಮುಖಂಡರು, ಸಾರ್ವಜನಿಕರು ಪಕ್ಷಾತೀತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಎಂದು ಸಚಿವರು ಮನವಿ ಮಾಡಿದರು.

ಈ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ, ಸಿಇಒ ಡಾ. ವಾಸಂತಿ ಅಮರ್, ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ರಾಜಣ್ಣ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಸದಸ್ಯರು ಉಪಸ್ಥಿತರಿದ್ದರು.

Edited By : Vijay Kumar
PublicNext

PublicNext

19/06/2026 04:12 pm

Cinque Terre

3.39 K

Cinque Terre

0

ಸಂಬಂಧಿತ ಸುದ್ದಿ