ಭಟ್ಕಳ: ಗೋಹತ್ಯೆ ನಿಷೇಧ ಕಾಯ್ದೆಯಡಿ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿರುವ ಮೂಸಾನಗರದ ಇಸ್ಮಾಯಿಲ್ ಹವ್ವಾ (46) ಅವರನ್ನು ಉತ್ತರ ಕನ್ನಡ ಜಿಲ್ಲೆಯಿಂದ ಆರು ತಿಂಗಳ ಅವಧಿಗೆ ಗಡಿಪಾರು ಮಾಡಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಆದೇಶ ಹೊರಡಿಸಿದ್ದಾರೆ.
ಇಸ್ಮಾಯಿಲ್ ಹವ್ವಾ ವಿರುದ್ಧ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ 2020ರಿಂದ 2025ರ ಅವಧಿಯಲ್ಲಿ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯಡಿ ಒಟ್ಟು ಏಳು ಪ್ರಕರಣಗಳು ದಾಖಲಾಗಿವೆ. ಅವುಗಳಲ್ಲಿ ಎರಡು ಪ್ರಕರಣಗಳಲ್ಲಿ ನ್ಯಾಯಾಲಯ ಶಿಕ್ಷೆ ವಿಧಿಸಿದ್ದು, ಉಳಿದ ಐದು ಪ್ರಕರಣಗಳು ವಿಚಾರಣೆಯ ಹಂತದಲ್ಲಿವೆ.
ಆರೋಪಿ ನಿರಂತರವಾಗಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು, ಸಾರ್ವಜನಿಕ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಸಾಧ್ಯತೆ ಇರುವುದಾಗಿ ಪೊಲೀಸ್ ಇಲಾಖೆ ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ ಭಟ್ಕಳ ನಗರ ಠಾಣೆ ಪೊಲೀಸ್ ನಿರೀಕ್ಷಕರು ಗಡಿಪಾರು ಕ್ರಮಕ್ಕೆ ಸಂಬಂಧಿಸಿದ ಪ್ರಸ್ತಾವನೆಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಸಲ್ಲಿಸಿದ್ದರು.
ಪ್ರಕರಣದ ಕುರಿತು ಸಮಗ್ರ ವಿಚಾರಣೆ ನಡೆಸಿದ ಅಧಿಕಾರಿಗಳು ಅಭಿಯೋಜನೆ ಹಾಗೂ ಪ್ರತಿವಾದಿ ಪರ ವಾದಗಳನ್ನು ಆಲಿಸಿ, ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಕರ್ನಾಟಕ ಪೊಲೀಸ್ ಕಾಯ್ದೆ-1963ರ ಕಲಂ 55(ಎ) ಹಾಗೂ 55(ಬಿ) ಅಡಿಯಲ್ಲಿ ಗಡಿಪಾರು ಕ್ರಮ ಜಾರಿಗೊಳಿಸಲು ಆದೇಶಿಸಿದ್ದಾರೆ.
ಅದರಂತೆ ಇಸ್ಮಾಯಿಲ್ ಹವ್ವಾ ಅವರನ್ನು ಉತ್ತರ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಗೆ ಆರು ತಿಂಗಳ ಅವಧಿಗೆ ಗಡಿಪಾರು ಮಾಡಲಾಗಿದೆ. ಆದೇಶದಂತೆ ಭಟ್ಕಳ ನಗರ ಠಾಣೆ ಪೊಲೀಸರು ಆರೋಪಿಯನ್ನು ರಾಯಚೂರು ಗ್ರಾಮೀಣ ಠಾಣೆ ಅಧಿಕಾರಿಗಳ ಮುಂದೆ ಹಾಜರುಪಡಿಸಿ ಗಡಿಪಾರು ಆದೇಶವನ್ನು ಜಾರಿಗೊಳಿಸಿದ್ದಾರೆ.
Kshetra Samachara
20/06/2026 04:02 pm
LOADING...